ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ಪಡೆದ ನಂತರ ವಿಧಾನ ಮಂಡಳ ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.
ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಮಸೂದೆ ಮಂಡನೆಗೆ ಮುಂದಾಗಿದ್ದ ಸಿದ್ದರಾಮಯ್ಯ ಸರ್ಕಾರದ ನಡೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದಿದೆ ಎಂದು ಹೇಳಲಾಗುತ್ತಿದೆ.
ಜಾರಿಗೆ ತರಲು ಉದ್ದೇಶಿಸಿದ್ದ ಈ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ಬರೆದುಕೊಂಡಿದ್ದಾರೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೇ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಈ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ಕೈಗಾರಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಮಸೂದೆ -2024 ಮಂಡನೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ವಿಧೇಯಕದ ಮಂಡನೆಯನ್ನು ತಾತ್ಕಾಲಿಕವಾಗಿ ವಿಧೇಯಕವನ್ನು ತಡೆಹಿಡಿಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಉದ್ದೇಶಿತ ಮಸೂದೆಯಲ್ಲಿದ್ದ ಪ್ರಮುಖಾಂಶಗಳು…
ಆಡಳಿತಾತ್ಮಕ ಹುದ್ದೆಗೆ 50% (ಸೂಪರ್‌ವೈಸರ್, ವ್ಯವಸ್ಥಾಪಕ, ಟೆಕ್ನಿಕಲ್ ಇತರೆ ಉನ್ನತ ಹುದ್ದೆಗಳು)
ಆಡಳಿತೇತರ ಹುದ್ದೆಗೆ 75% (ಕರ್ಕ್, ಕೌಶಲ ರಹಿತ, ಅರೆ ಕೌಶಲ ಗುತ್ತಿಗೆ ನೌಕರ)
ಉಲ್ಲಂಘಿಸಿದರೆ ಕನಿಷ್ಠ 10 ಸಾವಿರ ರೂ., ಗರಿಷ್ಠ 25 ಸಾವಿರ ರೂ. ದಂಡ.
ದಂಡ ವಿಧಿಸಿದ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ
ಕನ್ನಡಿಗರಿಗೆ ಅರ್ಹತೆ ಹೇಗೆ?
ಕರ್ನಾಟಕದಲ್ಲಿ ಜನಿಸಿರಬೇಕು.
ಕರ್ನಾಟಕದಲ್ಲಿ 15 ವರ್ಷ ವಾಸವಿರಬೇಕು
ಕನ್ನಡ ಓದಲು, ಬರೆಯಲು ಮಾತನಾಡಲು ಬರಬೇಕು
ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ವಿಧೇಯಕ ಮಂಡನೆಗೆ ಸಂಪುಟ ಒಪ್ಪಿಗೆ ಕೊಟ್ಟಿರುವುದನ್ನ ಈ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಕಟಿಸಿದ್ದರು. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದರು.
ಇದರ ಬೆನ್ನಲ್ಲೇ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಐಟಿ-ಬಿಟಿ ವಲಯದಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಉದ್ಯಮಿ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜೂದರ್ ಷಾ, ಟೆಕ್ ಹಬ್ ಆಗಿರೋ ನಮಗೆ ನುರಿತ ಪ್ರತಿಭೆಗಳು ಬೇಕಾಗಿವೆ. ನಮಗೆ ಸ್ಥಳೀಯ ಎನ್ನುವುದಕ್ಕಿಂತ ನುರಿತ ಪ್ರತಿಭೆಗಳು ಬೇಕಿದೆ ಎಂದು ಪೋಸ್ಟ್ ಮಾಡಿದ್ದರು. ಮೋಹನ್ ದಾಸ್ ಪೈ ವಿರೋಧ ವ್ಯಕ್ತಪಡಿಸಿ, ಇದು ತಾರತಮ್ಯ, ಸಂವಿಧಾನಕ್ಕೆ ವಿರುದ್ಧವಾಗಿದೆ. ನಾವು ಯಾರೆಂದು ಸರ್ಕಾರ ಪ್ರಮಾಣೀಕರಿಸುತ್ತದೆಯೇ? ಇದು ಫ್ಯಾಸಿಸ್ಟ್ ಮಸೂದೆಯಾಗಿದೆ ಎಂದು ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ