ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ವಿಚಾರಣೆಗೆ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಾಲ್ಮೀಕಿ ನಿಗಮದಿಂದ ಹಲವಾರು ಕೋಟಿ ರೂಪಾಯಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್ ಖಾತೆಗಳಿಗೆ (Bank Account) ಹಣ ವರ್ಗಾವಣೆಯಾಗಿದೆ. ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಗೇಂದ್ರ ಅವರ ಬ್ಯಾಂಕ್ ಖಾತೆ ಜೊತೆ ಅವರ ಕುಟುಂಬಸ್ಥರ ಬ್ಯಾಂಕ್ ಖಾತೆಯನ್ನು ಪರಿಶೀಲಿಸಲಾಗಿದೆ.
ಈ ವೇಳೆ ನಾಗೇಂದ್ರ ಪತ್ನಿಯ ಬ್ಯಾಂಕ್ ಖಾತೆಯಲ್ಲಿಯೂ ಹೆಚ್ಚುವರಿಯಾಗಿ ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಕಾರಣಕ್ಕೆ ಇ.ಡಿ. ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರ ಮನೆಯ ಮೇಲೆ ದಾಳಿ ಮಾಡಿದ್ದರು. ನಂತರ ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಸಹಾಯಕರನ್ನು ಕರೆದು ವಿಚಾರಣೆ ಮಾಡಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ ನಂತರ ಬಂಧಿಸಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ