ಅಂಕೋಲಾ : ಶಿರೂರು ಭೂಕುಸಿತದ ಮಣ್ಣು ತೆರವು ಮತ್ತು ಸಿಲುಕಿಕೊಂಡಿರಬಹುದಾದವರ ಶೋಧ ಕಾರ್ಯಾಚರಣೆಯಲ್ಲಿ ಎಸ್.ಡಿ.ಆರ್. ಎಫ್ ನಿಂದ 46 ಜನ ಎನ್.ಡಿ.ಆರ್.ಎಫ್ ನಿಂದ 24 ಸಿಬ್ಬಂದಿ ತೊಡಗಿಕೊಂಡಿದ್ದಾರೆ. ಇದಕ್ಕೆ 44 ಜನ ಮಿಲಿಟರಿ ಹಾಗೂ ನೌಕಾಪಡೆ ಯವರೂ ಕೂಡ ಕೈಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಭಾನುವಾರ (ಜುಲೈ 21) ಶಿರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನೌಕಾದಳ ಹಾಗೂ ರಕ್ಷಣಾ ತಂಡದವರಿಗೆ ಎಲ್ಲೆಡೆ ಹುಡುಕುವಂತೆ ಸೂಚನೆ ನೀಡಲಾಗಿದೆ. ಗೋವಾ ಮತ್ತು ಅಂಕೋಲಾ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೂ ಕುಸಿತದಿಂದ 10 ಜನ ಕಾಣೆಯಾಗಿದ್ದಾರೆ. ಅದರಲ್ಲಿ ಏಳು ಜನರ ಶವಗಳು ಪತ್ತೆಯಾಗಿದ್ದು ಇನ್ನೂ ಮೂವರು ಕಾಣೆಯಾಗಿದ್ದು ಅವರ ಪತ್ತೆಗಾಗಿ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ. . ಅಲ್ಲಿಯೇ ವಾಸವಾಗಿರುವ ಒಂದೇ ಕುಟುಂಬದವರು ಟೀ ಅಂಗಡಿಯನ್ನು ಇಟ್ಟುಕೊಂಡಿದ್ದರು. ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.
ಘಟನೆ ನಡೆದ ದಿನವೇ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಶಾಸಕರನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ರಿಸ್ಕ್ ಆಪರೇಶನ್ ಅನ್ನು ತ್ವರಿತವಾಗಿ ಮಾಡಬೇಕೆಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸ್ಪಷ್ಟವಾಗಿ ಸೂಚಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಮಣ್ಣಿನಡಿ ಸಿಲುಕಿ ಹಾಕಿಕೊಂಡಿರಬಹುದಾದವರ ರಕ್ಷಣೆಗೆ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಈಗ ಮಿಲಿಟವರಿಯವರೂ ಈ ಕಾರ್ಯಾಚರಣೆಯಲ್ಲಿ ಕೈ ಜೋಡಿಸಿದ್ದಾರೆ. ಸಂಸತ್ರಸ್ತರ ಕುಟುಂಬದ ನೆರವಿಗೆ ಸರ್ಕಾರ ಸಾಧ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಿದೆ ಎಂದರು.
ವಿಧಾನಸಭಾ ಅಧಿವೇಶನ ನಡೆಯುತ್ತಿದ್ದುದರಿಂದ ಇಂದು (ಭಾನುವಾರ) ಭೇಟಿ ನೀಡಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತಕ್ಕೆ ಎಲ್ಲಾ ಕ್ರಮವನ್ನೂ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದೆ. ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ ಪ್ರಕಟಿಸಲಾಗಿದ್ದು, ಅದನ್ನು ವಿತರಿಸಲಾಗಿದೆ. ಒಂದು ವೇಳೆ ಭೂ ಕುಸಿತದಲ್ಲಿ ಇನ್ಯಾರಾದರೂ ಮೃತಪಟ್ಟಿದ್ದರೆ ಅವರಿಗೂ 5 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಅವೈಜ್ಞಾನಿಕ ಕಾಮಗಾರಿ: ತಪ್ಪಿತಸ್ಥರ ವಿರುದ್ಧ ಕ್ರಮ
ಭೂ ಕುಸಿತ ಐ.ಆರ್.ಬಿ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸಂಭವಿಸಿದೆ ಎಂಬ ಆರೋಪಗಳ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರೇ ತಪ್ಪು ಮಾಡಿದರೂ ಕೂಡ ಅವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. , ರಸ್ತೆ ನಿರ್ಮಾಣ ಮಾಡಿರುವವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಅವರು ಯಾರೇ ಆಗಿರಲಿ ತೆರವು ಕಾರ್ಯಾಚರಣೆ ಮುಗಿದ ಮೇಲೆ ಪ್ರಕರಣದ ಬಗ್ಗೆ ಗಮನಹರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಸ್ತೆ ಪೂರ್ಣಗೊಳ್ಳದಿದ್ದರೂ ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಕೇಂದ್ರ ರಸ್ತೆ ಸಾರಿಗೆ ಸಚಿವರೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ. ಕಳಪೆ ಕೆಲಸವಾಗಿದ್ದರೆ ಕೂಡಲೇ ಅದನ್ನು ಸರಿಪಡಿಸುವ ಕೆಲಸ ಮಾಡಬೇಕು. ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯ ಮಾಡಲಾಗುವುದು ಎಂದರು.
ರಾಜ್ಯ ಸರ್ಕಾರ ವಿಳಂಬ ಮಾಡಿಲ್ಲ
ಕೇರಳದ ಲಾರಿ ಇಲ್ಲಿ ಸಿಕ್ಕಿಹಾಕಿಕೊಡಿದ್ದು, ಆದರೆ ರಾಜ್ಯ ಸರ್ಕಾರ ರಕ್ಷಣಾ ಕಾರ್ಯಾಚರಣೆಯಲ್ಲಿ ವಿಳಂಬ ಮಾಡುತ್ತಿದೆ ಎಂದು ಕೇರಳದಲ್ಲಿ ಆರೋಪ ಕೇಳಿಬಂದಿರುವ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರ ಯಾವುದನ್ನೂ ವಿಳಂಬ ಮಾಡಿಲ್ಲ. ಎಲ್ಲವನ್ನೂ ತ್ವರಿತವಾಗಿ ಮಾಡುತ್ತಿದ್ದೇವೆ. ಕೇರಳದ ಅರ್ಜುನ್ ಎಂಬುವರು ಕಾಣೆಯಾಗಿದ್ದು, ತಮ್ಮ ರಾಜ್ಯದವರೆಂದು ಅವರೆಲ್ಲ ಬಂದಿರಬಹುದು. ನಾವು ವಿಳಂಬ ಮಾಡದೆ, ನಿರ್ಲಕ್ಷ್ಯ ತೋರದೆ ಕೆಲಸ ಮಾಡುತ್ತಿದ್ದೇವೆ ಎಂದರು.
ಕಳೆದ ಬಾರಿ ಬರವಿದ್ದು, ಈ ಬಾರಿ ವಿಪರೀತ ಮಳೆಯಾಗುತ್ತಿದೆ. ಬಹಳ ವರ್ಷ ಗಳಿಂದ ಇಲ್ಲಿ ಭೂ ಕುಸಿತವಾಗಿರಲಿಲ್ಲ. ಆದರೆ ಈಸಲದ ಮಳೆಯಲ್ಲಿ ಇದು ಸಂಭವಿಸಿದೆ. ಎಲ್ಲೆಲ್ಲಿ ಭೂ ಕುಸಿತವಾಗುವ ಸಂಭವ ಅಥವಾ ಬೆದರಿಕೆ ಇದೆಯೋ ಅದನ್ನು ಗುರುತು ಮಾಡಿ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಪ್ರಕೃತಿ ವಿಕೋಪದ ಸಂದರ್ಭದಲ್ಲಿ ರಾಜಕಾರಣ ಮಾಡಲ್ಲ….
ರಾತ್ರಿ ವೇಳೆ ತೆರವು ಕಾರ್ಯಾಚರಣೆ ನಡೆಯುವುದಿಲ್ಲ ಎಂದು ತಿಳಿಸಿದ ಸಿದ್ದರಾಮಯ್ಯ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ರಾಜಕಾರಣ ಮಾಡುವುದಿಲ್ಲ. ಕೇಂದ್ರ ಸರ್ಕಾರದ ತಂಡ ಎನ್.ಡಿ.ಆರ್. ಎಫ್ ಕೂಡ ಇಲ್ಲಿ ಕಾರ್ಯಾಚರಣೆ ಮಾಡುತ್ತಿದೆ. ನೌಕಾ ತಂಡವೂ ಇದೆ. ಹೀಗಾಗಿ ಇಂಥ ಸಂದರ್ಭದಲ್ಲಿ ನಾನು ಯಾರ ಮೇಲೆಯೂ ದೋಷ ಹೊರಿಸುವುದಿಲ್ಲ ಎಂದು ಹೇಳಿದರು.
ಉಳುವರೆ ಗ್ರಾಮದಲ್ಲಿ ಮನೆಗಳ ಹಾನಿ: ಕೂಡಲೆ ಪರಿಹಾರ
ಉಳುವರೆ ಎಂಬ ಗ್ರಾಮದಲ್ಲಿ ಮಳೆಯಿಂದಾಗಿ ಏಳು ಮನೆಗಳು ಹಾನಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೂಡಲೇ ಪರಿಹಾರ ನೀಡಲಾಗುವುದು ಹಾಗೂ ಪರ್ಯಾಯ ಸ್ಥಳವನ್ನೂ ನೀಡಲಾಗುವುದು ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ