ವೀಡಿಯೊ..| ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಅಂಕೋಲಾ : ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಭಾರಿ ದುರಂತ ಸಂಭವಿಸಿದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಪ್ರದೇಶಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರ್ಯಾಚರಣೆಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದ ಅವರು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಎಸ್‌ಡಿಆರ್‌ಎಫ್‌ (SDRF) ಹಾಗೂ ಎನ್‌ಡಿಆರ್‌ಎಫ್‌ (NDRF) ಜೊತೆ ಚರ್ಚಿಸಿದರು. ಸಿಬ್ಬಂದಿಗೆ ರಕ್ಷಣಾ ಕಾರ್ಯಾಚರಣೆಯಲ್ಲಿ ಎದುರಾಗುತ್ತಿರುವ ಸವಾಲುಗಳ ಬಗ್ಗೆಯೂ ಅವರು ಚರ್ಚಿಸಿದರು.

ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಎತ್ತರದ ಗುಡ್ಡವಿದ್ದರೆ -ಬಲ ಭಾಗದಲ್ಲಿ ನದಿ ಭೋರ್ಗರೆದು ಹರಿಯುತ್ತಿದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ರಸ್ತೆಯ ಮತ್ತೊಂದು ಪಕ್ಕದಲ್ಲಿ ಹರಿಯುತ್ತಿರುವ ನದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡರು ಸಿದ್ದರಾಮಯ್ಯ ಅವರಿಗೆ ವಿವರಿಸಿದರು.

ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆ ಹಾಗೂ ಮತ್ತೆ ಗುಡ್ಡ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ, ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಆರ್.ವಿ.ದೇಶಪಾಂಡೆ, ಸತೀಶ ಸೈಲ್, ಭೀಮಣ್ಣ ನಾಯ್ಕ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ, ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾರಾಯಣ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕವಾಗಿಲ್ಲ : ಸಿಎಂ ಕಚೇರಿ ಸ್ಪಷ್ಟನೆ

.

 

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement