ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿಯನ್ನು ಪೂರ್ಣ ಗೊಳಿಸದೇ ಸಾರ್ವಜನಿಕರಿಂದ ಟೋಲ್ ಏಕೆ ಸಂಗ್ರಹ ಮಾಡುತ್ತಿದ್ದೀರಿ. ಕಾಮಗಾರಿಯು 2016 ಕ್ಕೆ ಮುಕ್ತಾಯಗೊಳಿಸಬೇಕಿದ್ದರೂ ಈವರೆಗೂ ಮುಕ್ತಾಯಗೊಳಿಸದೆ, ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ಮಿಸ್ ಲೀಡಿಂಗ್ ಮಾಡುವುದಲ್ಲದೆ ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದರು.
ಭಾನುವಾರ ಕಾರವಾರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲ್ಲಿ ರಸ್ತೆ ಮಾಡಲು ನಮ್ಮ ಜಾಗ ನೀಡಿದ್ದೇವೆ, ನೀರು ನೀಡಿದ್ದೇವೆ. ನೀವು ಹೇಳಿದ ಹಾಗೆ ಕೇಳುವುದಕ್ಕೆ ನಾವಿಲ್ಲ, ರಸ್ತೆ ಕಾಮಗಾರಿ ಆರಂಭಿಸುವ ಮುನ್ನ ಇಲ್ಲಿ ಸಂಭವಿಸಬಹುದಾದ ಗುಡ್ಡ ಕುಸಿತದಂತಹ ಅನಾಹುತಗಳ ಬಗ್ಗೆ ವೈಜ್ಞಾನಿಕ ವರದಿ ಪಡೆದಿದ್ದೀರಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತಂತೆ ಜಿಲ್ಲಾಧಿಕಾರಿಗಳಿಂದ ವರದಿ ಪಡೆದು, ರಾಜ್ಯ ಸರ್ಕಾರದಿಂದ ಕೇಂದ್ರ ಹೆದ್ದಾರಿ ಸಚಿವರಿಗೆ ತೀಕ್ಷ್ಣ ಪತ್ರ ಬರೆಯುವುದಾಗಿ ಹೇಳಿದರು.
ಪ್ರಸ್ತುತ ಜಿಯಾಜಿಕಲ್ ಸರ್ವೇ ಆಫ್ ಇಂಡಿಯಾ ಸಿದ್ಧಪಡಿಸಿರುವ ಜಿಲ್ಲೆಯ ಗುಡ್ಡ ಕುಸಿತ ಪ್ರದೇಶಗಳ ಕುರಿತ ವರದಿಯನ್ನು
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಪರಿಶೀಲಿಸಿ, ಹೆದ್ದಾರಿಯಾದ್ಯಂತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ ವಿದ್ಯುತ್ ಕಂಬಗಳನ್ನು ಮತ್ತು ವಿದ್ಯತ್ ಸಂಪರ್ಕ ಸಮಸ್ಯೆ ಯನ್ನು ಹೆಸ್ಕಾಂ ವತಿಯಿಂದ ತಕ್ಷಣ ಸರಿಪಡಿಸಬೇಕು. ಹೆಸ್ಕಾಂ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಇದು ವಿದ್ಯುತ್ ಜನರೇಟ್ ಮಾಡುವ
ಜಿಲ್ಲೆಯಾಗಿದ್ದು, ವಿಸ್ತೀರ್ಣ ಕೂಡಾ ದೊಡ್ಡದಾಗಿದ್ದು ಇಲ್ಲಿಗೆ ಹೆಚ್ಚಿನ ಸಿಬ್ಬಂದಿ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕೂಡ ಮಳೆಯಾಗುವ ಸಾಧ್ಯತೆಗಳಿದ್ದು, ಈ ರೀತಿಯಾಗಿ ಗುಡ್ಡ ಕುಸಿತ ಸೇರಿದಂತೆ ಯಾವುದೇ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿರು.
ಜಿಲ್ಲೆಯಲ್ಲಿರುವ ಅಪಾಯಕಾರಿ ಪ್ರದೇಶಗಳಲ್ಲಿನ ಗ್ರಾಮಗಳನ್ನು ಗುರುತಿಸಿ, ಇಲ್ಲಿ ಗ್ರಾಮಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ರಚಿಸಿ ಅಲ್ಲಿನ ಪರಿಸ್ಥಿತಿಯ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಆಗಿರುವ ಹಾನಿಯ ಕುರಿತಂತೆ ಶೀಘ್ರದಲ್ಲಿ ವರದಿ
ಸಿದ್ದಪಡಿಸಿ, ಶೀಘ್ರದಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದರು.
ಮಳೆಯಿಂದಾಗಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದವರು ಪುನಃ ತಮ್ಮ ಮನೆಗಳಿಗೆ ತೆರಳುವಾಗ ನೀಡುವ ಪರಿಹಾರದ
ಮೊತ್ತವನ್ನು ಹೆಚ್ಚಳ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಮನವಿ ಮಾಡಿದರು. ಈ ಬಗ್ಗೆ
ಪರಿಶೀಲನೆ ಮಾಡೋಣ ಎಂದು ಹೇಳಿದರು.
ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ನೆಲೆ ಕಲ್ಪಿಸುವ ಮೂಲಕ ಪರಿಹಾರ ಒದಗಿಸುವ ಬಗ್ಗೆ ಶಾಸಕ ಸತೀಶ್ ಸೈಲ್ ಅವರು ಕೋರಿದರು. ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳೋಣ ಎಂದರು.
ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಆಡಳಿತ ಸುಧಾರಣಾ
ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಶಾಸಕರಾದ ಶಿವರಾಮ ಹೆಬ್ಬಾರ, ಭೀಮಣ್ಣ ನಾಯ್ಕ, ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ, ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಅತೀಕ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ , ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶಕುಮಾರ ಸಿಂಗ್ , ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ, ಜಿ.ಪಂ. ಸಿಇಒ ಈಶ್ವರಕುಮಾರ ಕಾಂದು, ಎಸ್ಪಿ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು
ನಿಮ್ಮ ಕಾಮೆಂಟ್ ಬರೆಯಿರಿ