ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಬಂಧಿಸಬಾರದು ಹಾಗೂ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎನ್ನುವ ತನ್ನ ಈ ಹಿಂದಿನ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ವಿಸ್ತರಿಸಿದೆ.
ಪ್ರಕರಣದ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಶಾಸಕರು– ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಪೀಠದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ಶುಕ್ರವಾರ ನಡೆಸಿದರು.
ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಹೈಕೋರ್ಟ್ನ ವಿಚಾರಣಾ ಪೀಠದ ರೋಸ್ಟರ್ ಇದೇ 29ರಿಂದ ಬದಲಾಗುತ್ತಿರುವ ಹಿನ್ನೆಲೆಯಲ್ಲಿ ಪೀಠವು ಪ್ರಕರಣವನ್ನು ಮುಂದೂಡಿ ಆದೇಶಿಸಿತು.
ಮಹಿಳೆಯೊಬ್ಬರು ಯಡಿಯೂರಪ್ಪನವರು ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತಮ್ಮ ಮಗಳ ಮೇಲೆ ಅತ್ಯಾಚಾರ ನಡೆದಿದ್ದು, ನ್ಯಾಯ ಕೊಡಿಸಬೇಕೆಂದು ಯಡಿಯೂರಪ್ಪನವರಲ್ಲಿ ಮನವಿ ಮಾಡಲು ಅವರ ನಿವಾಸಕ್ಕೆ ಹೋಗಿದ್ದೆ. ಈ ವೇಳೆ ತನ್ನ ಮಗಳ ಮೇಲೆ ಯಡಿಯೂರಪ್ಪನವರು ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದರನ್ವಯ ಪೊಲೀಸರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ–2012ರ ಕಲಂ 8 ಮತ್ತು ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 354(ಎ) ಅಡಿಯಲ್ಲಿ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ