ವಯನಾಡು : ಭಾರೀ ಮಳೆಯ ನಡುವೆ ಮಂಗಳವಾರ ಬೆಳಿಗ್ಗೆ ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿ ಕನಿಷ್ಠ 24 ಜನರು ಸಾವಿಗೀಡಾಗಿದ್ದಾರೆ ಮತ್ತು ನೂರಾರು ಜನರು ಸಿಲುಕಿರುವ ಆತಂಕವಿದೆ ಎಂದು ವರದಿಯಾಗಿದೆ. ಎನ್‌ಡಿಆರ್‌ಎಫ್ ಮತ್ತು ಸೇನೆ ಸೇರಿದಂತೆ ಹಲವು ಏಜೆನ್ಸಿಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.
ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಸೇರಿವೆ. ಮಂಗಳವಾರ ನಸುಕಿನ ಜಾವ ಭೂಕುಸಿತ ಸಂಭವಿಸಿದ್ದು, ಮನೆಗಳು ಮತ್ತು ಕುಟುಂಬಗಳು ಕೊಚ್ಚಿಕೊಂಡು ಹೋಗಿವೆ. ವೈದ್ಯಕೀಯ ತಂಡಗಳು ಸೇರಿದಂತೆ 225 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಎರಡು ವಾಯುಪಡೆಯ ಹೆಲಿಕಾಪ್ಟರ್‌ಗಳು, ಎಂಐ-17 ಮತ್ತು ಎಎಲ್‌ಹೆಚ್ (ಅಡ್ವಾನ್ಸ್‌ಡ್ ಲೈಟ್ ಹೆಲಿಕಾಪ್ಟರ್) ಸಹ ಕಾರ್ಯಾಚರಿಸುತ್ತಿವೆ.
ಭಾರತೀಯ ನೌಕಾಪಡೆಯ ತಂಡವೊಂದು ರಕ್ಷಣಾ ಕಾರ್ಯದಲ್ಲಿ ನೆರವಾಗಲಿದೆ ಎಂದು ಕೇರಳ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಮಲಪ್ಪುರಂನ ನಿಲಂಬೂರ್ ಪ್ರದೇಶಕ್ಕೆ ಸೇತುವೆಯೂ ಕೊಚ್ಚಿಹೋಗಿದೆ. ಸುಮಾರು 70 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆಯನ್ನು ನಾವು ಖಚಿತಪಡಿಸಿದ್ದೇವೆ” ಎಂದು ಅವರು ಹೇಳಿದರು.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಪರಿಸ್ಥಿತಿಯನ್ನು ಎದುರಿಸಲು ಕೇಂದ್ರದಿಂದ ಎಲ್ಲಾ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದರು.
ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಕಾರ್ಯಾಲಯ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದೆ. ಪ್ರವಾಹದಲ್ಲಿ ಕೊಚ್ಚಿಹೋದ ವಾಹನಗಳು ಮರಗಳ ಬುಡದಲ್ಲಿ ಸಿಲುಕಿಕೊಂಡಿರುವುದು ಕಂಡು ಬಂದಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದ್ದು, ಮಾರ್ಗದಲ್ಲಿ ಬಿದ್ದಿರುವ ಬೃಹತ್ ಬಂಡೆಗಳಿಂದ ರಕ್ಷಣಾ ಕಾರ್ಯಕರ್ತರಿಗೆ ಕೆಲವು ಪ್ರದೇಶಗಳನ್ನು ತಲುಪಲು ಸಾಧ್ಯವಾಗುತ್ತಿಲ್ಲ.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆಯಲ್ಲಿ, “ವಯನಾಡಿನಲ್ಲಿ ಭೂಕುಸಿತದಲ್ಲಿ ಸಾಧ್ಯವಿರುವ ಎಲ್ಲಾ ರಕ್ಷಣಾ ಕಾರ್ಯಾಚರಣೆಗಳನ್ನು ಯೋಜಿಸಲಾಗುವುದು” ಎಂದು ಹೇಳಿದ್ದಾರೆ. “ಘಟನೆಯ ಬಗ್ಗೆ ನಮಗೆ ತಿಳಿದ ನಂತರ, ರಕ್ಷಣಾ ಕಾರ್ಯಾಚರಣೆಯಲ್ಲಿ ಸರ್ಕಾರಿ ವ್ಯವಸ್ಥೆಗಳು ಒಟ್ಟಾಗಿ ಸೇರಿಕೊಂಡಿವೆ. ಸಚಿವರು ವಯನಾಡ್‌ಗೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ಮುನ್ನಡೆಸುತ್ತಾರೆ” ಎಂದು ಮುಖ್ಯಮಂತ್ರಿ ಹೇಳಿದರು.
ಇದೇ ವೇಳೆ ಭೂಕುಸಿತದ ಹಿನ್ನೆಲೆಯಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ತುರ್ತು ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ಅನ್ನು ಸಹ ನೀಡಲಾಗಿದೆ.
ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ವಯನಾಡ ಮಾಜಿ ಸಂಸದ ರಾಹುಲ್ ಗಾಂಧಿ ಅವರು ಭೂಕುಸಿತಗಳಿಂದ ಉಂಟಾದ ಜೀವಹಾನಿಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
“ನಾನು ಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ, ಎಲ್ಲಾ ಏಜೆನ್ಸಿಗಳೊಂದಿಗೆ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು, ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲು ಮತ್ತು ಅಗತ್ಯವಿರುವ ಪರಿಹಾರ ಕಾರ್ಯಗಳು ಸೇರಿದಂತೆ ಯಾವುದೇ ಸಹಾಯದ ಬಗ್ಗೆ ನಮಗೆ ತಿಳಿಸಲು ನಾನು ಅವರಿಗೆ ಮನವಿ ಮಾಡಿದ್ದೇನೆ. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
“ನಾನು ಕೇಂದ್ರ ಸಚಿವರೊಂದಿಗೆ ಮಾತನಾಡುತ್ತೇನೆ ಮತ್ತು ವಯನಾಡಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ವಿನಂತಿಸುತ್ತೇನೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಆಡಳಿತಕ್ಕೆ ಸಹಾಯ ಮಾಡಲು ಎಲ್ಲಾ ಯುಡಿಎಫ್ ಕಾರ್ಯಕರ್ತರನ್ನು ನಾನು ಕೋರುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಭಾರತೀಯ ಹವಾಮಾನ ಇಲಾಖೆಯು ಕೇರಳದ ಉತ್ತರ ಜಿಲ್ಲೆಗಳಲ್ಲಿ ಮಂಗಳವಾರ ರೆಡ್ ಅಲರ್ಟ್ ಘೋಷಿಸಿದೆ. ಕಾಸರಗೋಡು, ಕಣ್ಣೂರು, ವಯನಾಡು, ಕೋಝಿಕ್ಕೋಡ್ ಮತ್ತು ಮಲಪ್ಪುರಂನಲ್ಲಿ ಮಂಗಳವಾರ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಪ್ರವಾಸಿಗರು ತೀವ್ರ ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ