ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 6ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ.
ಈ ಬಗ್ಗೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 6ರ ವರೆಗೆ ಜೋರಾದ ಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಅಲ್ಲದೆ, ಕರಾವಳಿ ಉದ್ದಕ್ಕೂ ಗಂಟೆಗೆ 40-55 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು ತಿಳಿಸಿದೆ. ಹಾಗೂ ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದೆ.
ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಿರುವ ಹವಾಮಾನ ಇಲಾಖೆ ಈ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆ ಸುರಯಲಿದೆ ಎಂದು ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವರೆಗೆ ಗಾಳಿ ಬೀಸಬಹುದು ಎಂದು ಹೇಳಿದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ನಿಮ್ಮ ಕಾಮೆಂಟ್ ಬರೆಯಿರಿ