ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಹಿಂದಿನ ಬಿಜೆಪಿ ಆಡಳಿತದ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ರಾಜ್ಯ ಸರ್ಕಾರವು ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ ಮತ್ತು ಉಮೇಶ್ ಎಂ. ಅಡಿಗ ಅವರ ವಿಭಾಗೀಯ ಪೀಠ ಸೋಮವಾರ ಆದೇಶವನ್ನು ಕಾಯ್ದಿರಿಸಿದೆ.
ಸಿಬಿಐ ಪರವಾಗಿ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ ಅವರು “ರಾಜ್ಯ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದರೂ ಸಿಬಿಐ ಎಫ್‌ಐಆರ್ ಬಾಕಿ ಉಳಿಯಲಿದೆ. ಇದು ಪ್ರಮುಖ ವಿಚಾರವಾಗಿದೆ. ಅಲ್ಲದೆ, ಸಿಬಿಐ ಎಫ್‌ಐಆರ್ ಪ್ರಶ್ನಿಸಿ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ” ಎಂದು ವಾದಿಸಿದರು.
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ ದಳವಾಯಿ ಅವರು “ಒಮ್ಮೆ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿ ಅದನ್ನು ಹಿಂಪಡೆದರೆ ತನಿಖೆ ಮೊಟಕಾಗಲಿದೆಯೇ ಎಂಬುದು ನ್ಯಾಯಾಲಯ ಮುಂದೆ ಇರುವ ಪ್ರಶ್ನೆ. ಭ್ರಷ್ಟಾಚಾರ ನಿರೋಧಕ ಕಾಯಿದೆ ಅಡಿ ಅಪರಾಧದ ತನಿಖೆ ನಡೆಸುವ ಸಿಬಿಐ ಸಂಪೂರ್ಣ ಸ್ವತಂತ್ರವಾಗಿರುತ್ತದೆ. ಇಲ್ಲಿ ಅರ್ಜಿದಾರರಿಗೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದು ಊರ್ಜಿತವಾಗುವುದಿಲ್ಲ. ಒಮ್ಮೆ ಸಿಬಿಐ ಪ್ರಕರಣ ದಾಖಲಿಸಿದ ಮೇಲೆ ಅದು ತಾರ್ಕಿಕ ಅಂತ್ಯ ಕಾಣಬೇಕು. ಸಿಬಿಐ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ವಜಾ ಮಾಡಬೇಕು. ಇದರಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ” ಎಂದರು.
ರಾಜ್ಯ ಸರ್ಕಾರದ ಪರವಾಗಿ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು “ಸಿಬಿಐ ಕೇಂದ್ರ ಸರ್ಕಾರದ ಒಂದು ಘಟಕ. ಅದು ಸ್ವತಂತ್ರ ಸಂಸ್ಥೆಯಲ್ಲ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಡಿ ಬರುವ ಸಿಬಿಐಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಪಶ್ಚಿಮ ಬಂಗಾಳ ಪ್ರಕರಣದಲ್ಲಿ ಸಿಬಿಐ ಸೂಕ್ತ ಪಕ್ಷಕಾರರಲ್ಲ. ಕೇಂದ್ರ ಸರ್ಕಾರ ಸೂಕ್ತ ಪಕ್ಷಕಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಡಿ ಕೆ ಶಿವಕುಮಾರ ಅವರು ಎಫ್‌ಐಆರ್ ರದ್ದುಪಡಿಸುವಂತೆ ಕೋರಿದ್ದರು. ಇಲ್ಲಿ ರಾಜ್ಯ ಸರ್ಕಾರದ ಪಾತ್ರ ಇರಲಿಲ್ಲ. ಸಿಬಿಐ ಮತ್ತು ಶಿವಕುಮಾರ ಪಕ್ಷಕಾರರಾಗಿದ್ದರು. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದ ವಿಚಾರವಾಗಿರಲಿಲ್ಲ” ಎಂದರು.
“ಸಿಬಿಐ ಒಪ್ಪಿಗೆ ವಿಚಾರದಲ್ಲಿ ಸರ್ಕಾರ ನ್ಯಾಯಾಲಯಕ್ಕೆ ವಂಚಿಸಿದೆ. ಇಲ್ಲಿ ಅನುಮತಿ ಪಡೆದಿರುವುದು ಪ್ರಶ್ನೆಯಲ್ಲ. ಒಪ್ಪಿಗೆ ಕಾನೂನುಬಾಹಿರವಾಗಿ ನೀಡಿರುವುದು ವಿಚಾರವಾಗಿದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಸರ್ಕಾರವು ಕಾನೂನನ್ನು ಹೀಗೆ ಬಳಕೆ ಮಾಡಲಾಗದು. ಶಿವಕುಮಾರ ವಿರುದ್ಧದ ಆದಾಯ ತೆರಿಗೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಈ ವಿಚಾರಗಳನ್ನು ನ್ಯಾಯಾಲಯದ ಮುಂದೆ ಇಡಬಾರದು ಎಂದು ಸಿಬಿಐ ಹೇಳಲು ಆಗದು” ಎಂದರು.
“ದೆಹಲಿ ವಿಶೇಷ ಪೊಲೀಸ್ ಕಾಯಿದೆ ಸೆಕ್ಷನ್ 3ರ ಅಡಿ ಇಲ್ಲಿ ಸಾಮಾನ್ಯ ಒಪ್ಪಿಗೆ ಪಡೆಯಲಾಗಿಲ್ಲ. ರಾಜ್ಯ ಸರ್ಕಾರ ಸಾಮಾನ್ಯ ಒಪ್ಪಿಗೆ ನೀಡಿಲ್ಲ. ಈ ಪ್ರಕರಣದಲ್ಲಿ ವಿಶೇಷ ಒಪ್ಪಿಗೆ ನೀಡಲಾಗಿದೆ” ಎಂದು ಆಕ್ಷೇಪಿಸಿದರು.
ಡಿ ಕೆ ಶಿವಕುಮಾರ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ ಮನು ಸಿಂಘ್ವಿ ಅವರು “ಸಿಬಿಐಗೆ ಅನುಮತಿ ನೀಡಿರುವುದನ್ನು ಹಿಂಪಡೆದಿರುವುದನ್ನು ಸಿಬಿಐ ಪ್ರಶ್ನಿಸಿದೆ. ಇಲ್ಲಿ ಸಿಬಿಐ ಮತ್ತು ರಾಜ್ಯ ಸರ್ಕಾರ ಪಕ್ಷಕಾರರು. ನಾನು ಖಾಸಗಿ ವ್ಯಕ್ತಿಯಾಗಿದ್ದೇನೆ. ಕೇಂದ್ರ ಸರ್ಕಾರದ ಪರ್ಯಾಯ ರೂಪದಂತೆ ಸಿಬಿಐ ವರ್ತಿಸುತ್ತದೆ. ಸಾಮಾನ್ಯ/ವಿಶೇಷ ಒಪ್ಪಿಗೆ ವಿಚಾರವು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದೆ. ನಮ್ಮ ಪ್ರಕರಣದಲ್ಲಿ ಸಾಮಾನ್ಯ ಒಪ್ಪಿಗೆ ನೀಡಲಾಗಿಲ್ಲ, ನಿರ್ದಿಷ್ಟ ಒಪ್ಪಿಗೆ ನೀಡಲಾಗಿದೆ. ಈ ಪ್ರಕರಣವನ್ನು ರಾಜ್ಯ ಪೊಲೀಸರು ಅಥವಾ ಲೋಕಾಯುಕ್ತ ಏಕೆ ತನಿಖೆ ನಡೆಸಲಿಲ್ಲ. ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದಿರುವುದಕ್ಕೂ ಸಿಬಿಐ ಎಫ್‌ಐಆರ್ ರದ್ದತಿ ಅರ್ಜಿ ವಜಾ ಮಾಡಿದ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದಕ್ಕೂ ಯಾವುದೇ ಸಂಬಂಧವಿಲ್ಲ” ಎಂದರು.
ಸುದೀರ್ಘವಾಗಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿತು.
ನಿಮ್ಮ ಕಾಮೆಂಟ್ ಬರೆಯಿರಿ