ಬೆಳಗಾವಿ | ಚಚಡಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿಭೇದಿ; 41 ಜನ ಆಸ್ಪತ್ರೆಗೆ ದಾಖಲು

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 41 ಜನ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ತೀವ್ರ ಅಸ್ವಸ್ಥಗೊಂಡ ಮೂವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಇತರ ಮೂವರನ್ನು ಬೈಲಹೊಂಗಲ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಒಂದು ವಾರದಿಂದ ಗ್ರಾಮದ ಜನರಲ್ಲಿ ವಾಂತಿಭೇದಿ ಕಾಣಿಸಿಕೊಂಡಿದೆ. ಇದು ಸೋಮವಾರ ಹತೋಟಿ ಮೀರಿದೆ. ಒಂದೇ ದಿನ 41 ಜನರಲ್ಲಿ ವಾಂತಿಭೇದಿ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥಗೊಂಡಿರುವವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಲಾಗಿದೆ. ಈರವ್ವ ಗಾಳಿಮಠ(63) ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೆಲವರು ಚಚಡಿ ಮತ್ತು ಇಂಚಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮದ ಬೋರ್ ವೆಲ್ ಮೂಲಕ ನೀರು ತುಂಬಿಸಿ ಅಲ್ಲಿಂದ ಮನೆಗಳಿಗೆ ನಳಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಮನೆಗಳಿಗೆ ನೀರು ಪೂರೈಸುವ ಪೈಪ್ ಲೈನ್ ಗೆ ಚರಂಡಿ ನೀರು ಸೇರಿಕೊಂಡಿದ್ದರಿಂದ ಸಮಸ್ಯೆ ಸೃಷ್ಟಿಯಾಗಿದೆ ಎಂಬುದು ಗ್ರಾಮಸ್ಥರ ಆರೋಪ. ಸದ್ಯ ಚಚಡಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಪರಿಸರದಲ್ಲಿ ಸಮಸ್ಯೆ ಹೆಚ್ಚು ಕಾಣಿಸಿಕೊಂಡಿದೆ.
ಡಿಎಚ್ಒ ಡಾ. ಮಹೇಶ ಕೋಣಿ ಅವರು ಚಚಡಿಗೆ ಭೇಟಿ ನೀಡಿ ಜನರ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತಿ-ಭೇದಿ ಕಾಣಿಸಿಕೊಂಡಿದೆ. ಯಾವುದೇ ಪ್ರಾಣ ಹಾನಿ ಆಗಿಲ್ಲ. ತೀವ್ರ ಅಸ್ವಸ್ಥಗೊಂಡವರನ್ನು ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ನೀರನ್ನು ಕುದಿಸಿ ಆರಿಸಿ ಕುಡಿಯುವಂತೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ. ಶಾಸಕ ಮಹಾಂತೇಶ ಕೌಜಲಗಿ ಅವರು ಚಚಡಿ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ಚರ್ಡಿಗ ಗ್ರಾಮದಲ್ಲಿ ನೀರು ಶುದ್ದೀಕರಣ ಘಟಕಗಳಿವೆ. ಆದರೆ, ಅವುಗಳನ್ನು ಶುದ್ಧೀಕರಣ ಮಾಡಿಲ್ಲ. ವಾಂತಿ-ಭೇದಿ ಆರಂಭವಾಗುತ್ತಲೇ ನೀರನ್ನು ಶುದ್ಧೀಕರಣ ಮಾಡಿದ್ದರೆ ಇಷ್ಟೊಂದು ಸಮಸ್ಯೆ ಸೃಷ್ಟಿಯಾಗುತ್ತಿರಲಿಲ್ಲ. ಹೀಗಾಗಿ ಇದಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಸಾಗರ : ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ವಿದ್ಯಾರ್ಥಿ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement