ಬೆಂಗಳೂರು : ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪುಷ್ಪಾ ಅಮರನಾಥ ರಾಜ್ಯ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆಯಾಗಿದ್ದರು. ಅವರ ಬದಲಿಗೆ ಸೌಮ್ಯಾ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಚಂಡೀಗಢ ಮತ್ತು ಅರುಣಾಚಲ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಮಾಡಲಾಗಿದೆ.
ಸೌಮ್ಯ ರೆಡ್ಡಿ ಅವರು 2018 ರಲ್ಲಿ ಜಯನಗರದಿಂದ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಆದಾಗ್ಯೂ, ಅವರು ಮೇ 2023 ರಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಕೇವಲ 16 ಮತಗಳಿಂದ ಸೋತಿದ್ದರು.
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ತೇಜಸ್ವಿ ಸೂರ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದರು.
ಸೌಮ್ಯ ಅವರು ಆರ್ ವಿ ಕಾಲೇಜ್ ಆಫ್ ಎಂಜಿನಿಯರಿಂಗ್ ನಿಂದ ಬಿಇ (ಕೆಮಿಕಲ್ ಎಂಜಿನಿಯರಿಂಗ್) ಮತ್ತು ನ್ಯೂಯಾರ್ಕ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಎಂಎಸ್ (ಎನ್ವಿರಿಯಾನ್ಮೆಂಟಲ್ ಟೆಕ್ನಾಲಜಿ) ಪದವಿ ಪಡೆದಿದ್ದಾರೆ.
ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯಲ್ಲಿ ಪಕ್ಷಕ್ಕೆ ಸಹಾಯವಾಗಲಿದೆ ಎಂದು ಕಾಂಗ್ರೆಸ್ ರಾಜ್ಯ ಘಟಕ ಅವರ ಹೆಸರನ್ನು ಶಿಫಾರಸು ಮಾಡಿದೆ ಎಂದು ವಿಶ್ಲೇಷಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ