ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಭೂ ಮಂಜೂರಾತಿ ಹಗರಣದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ಕರ್ನಾಟಕ ರಾಜ್ಯಪಾಲರು ಶನಿವಾರ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ ಎನ್ನಲಾಗಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ. ಸಿದ್ದರಾಮಯ್ಯ ಅವರ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು.
ನಂತರ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟೀಸ್ ಜಾರಿ ಮಾಡಿದ್ದರು. ಇದೀಗ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ‘ಮುಡಾ ಹಗರಣ’ದ ಬಗ್ಗೆ ಫ್ಲ್ಯಾಗ್ ಮಾಡಿದ ಆರ್‌ಟಿಐ ಕಾರ್ಯಕರ್ತ ಟಿಜೆ ಅಬ್ರಹಾಂ ಅವರನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ರಾಜಭವನದಲ್ಲಿ ಭೇಟಿಯಾಗುವಂತೆ ಸೂಚಿಸಿದ್ದಾರೆ.
ಕರ್ನಾಟಕದಲ್ಲಿ ಪ್ರಮುಖ ರಾಜಕೀಯ ವಿವಾದವಾಗಿ ಮಾರ್ಪಟ್ಟಿರುವ ಮುಡಾ ಹಗರಣದ ಆರೋಪಗಳು ಮುಡಾದಿಂದ ಭೂ ಮಂಜೂರಾತಿಯಲ್ಲಿನ ಅಕ್ರಮಗಳ ಆರೋಪಗಳನ್ನು ಒಳಗೊಂಡಿವೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಲಾಭ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
2021 ರಲ್ಲಿ ಮೈಸೂರಿನ ಕೆಸರೆ ಗ್ರಾಮದಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರ 3 ಎಕರೆ ಜಾಗವನ್ನು ಮುಡಾ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಂಡಿತು. ಪ್ರತಿಯಾಗಿ, ಆಕೆಗೆ ದಕ್ಷಿಣ ಮೈಸೂರಿನ ವಿಜಯನಗರ ಪ್ರದೇಶದಲ್ಲಿ ಇತರ ಪ್ಲಾಟ್‌ಗಳನ್ನು ಮಂಜೂರು ಮಾಡಲಾಯಿತು. ಆರೋಪಿತರ ಪ್ರಕಾರ, ವಿಜಯನಗರ ಪ್ಲಾಟ್‌ಗಳ ಮಾರುಕಟ್ಟೆ ಮೌಲ್ಯವು ಕೆಸರೆಯಲ್ಲಿರುವ ಅವರ ಮೂಲ ಭೂಮಿಗಿಂತ ಗಮನಾರ್ಹವಾಗಿ ಹೆಚ್ಚಾಗಿದೆ.
ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, ಮಡಿಕೇರಿಯ ಟಿ.ಜೆ. ಅಬ್ರಾಹಂ ಹಾಗೂ ಪ್ರದೀಪ್‌ ಎನ್ನುವವರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು.

ಪ್ರಮುಖ ಸುದ್ದಿ :-   ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಸಾವು

ಸಿದ್ದರಾಮಯ್ಯಗೆ ಸಂಕಷ್ಟ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಅವರ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ.
ಹೀಗಾದಲ್ಲಿ ರಾಜಕೀಯ ಮತ್ತು ಕಾನೂನಾತ್ಮಕವಾಗಿ ಸರ್ಕಾರ ಇದನ್ನುಎದುರಿಸಬೇಕಾಗುತ್ತದೆ. ಅಲ್ಲದೆ, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹವೂ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ರಾಜಕೀಯ ಬೆಳವಣಿಗೆಗಳು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement