ಬೆಂಗಳೂರು : ರಾಜ್ಯದ ಕರಾವಳಿ ಭಾಗದಲ್ಲಿ ಆಗಸ್ಟ್ 27ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಆಗಸ್ಟ್ 27ರ ವರೆಗೂ ಗಾಳಿ ಸಮೇತ ಭಾರಿ ಮಳೆ ಮುಂದುವರಿಯುವ ಸಂಭವವಿದ್ದು, ಶುಕ್ರವಾರದಿಂದ ಐದು ದಿನಗಳು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಅಲ್ಲದೇ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ತಿಳಿಸಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುರುವಾರ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳು ಮತ್ತು ಅದಕ್ಕೆ ಹೊಂದಿಕೊಂಡಿರುವ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಆಗಸ್ಟ್ 25 ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದ್ದು, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ