ಹುಬ್ಬಳ್ಳಿ: ಓಮ್ನಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಸಮೀಪದ ಹೆಬಸೂರ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ.
ಶುಕ್ರವಾರ ತಡ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾರ್ಶವಾಯುಗೆ ಔಷಧಿ ತರಲೆಂದು ಜಾಫರ್ಸಾಬ್ ಕುಟುಂಬದವರ ಜೊತೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಹಳಗಾದಲ್ಲಿರುವ ಆಸ್ಪತ್ರೆಗೆ ಹೋಗಿದ್ದರು. ಔಷಧ ಪಡೆದು ಊರಿಗೆ ಹಿಂತಿರುಗುತ್ತಿದ್ದ ವೇಳೆ ಹೆಬಸೂರ ಗ್ರಾಮದ ಬಳಿಕ ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.
ಮೃತರನ್ನು ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್ಸಾಬ್ (60), ಮೊಹ್ಮದ್ ಮುಸ್ತಫಾ (36), ಶೋಯಬ್ (6) ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಡಿ ನೀಡಿದ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ