ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ.
ನಕಲಿ ಸಹಿ ವಿಚಾರವಾಗಿ ಸಿದ್ದರಾಮಯ್ಯ ಅವರ ಪತ್ನಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದಾರೆ. ನಕಲಿ ದಾಖಲೆ ಸೃಷ್ಟಿ, ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಪಾರ್ವತಿ ಅವರು ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ ಪತ್ರವನ್ನು ಕಡತಕ್ಕೆ ಸೇರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪತ್ರದಲ್ಲಿರುವ ಪಾರ್ವತಿ ಅವರ ಸಹಿ ಹಾಗೂ ಮಾಹಿತಿ ಹಕ್ಕಿನಲ್ಲಿ ಪಡೆದ ಪತ್ರದಲ್ಲಿ ಇರುವ ಸಹಿ ಬದಲಾವಣೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿ ತಿಳಿಸಿದೆ.
ಮುಡಾ ಹಗರಣ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸರಣಿ ದೂರುಗಳು ದಾಖಲಾಗುತ್ತಲೇ ಇವೆ. ರಾಜ್ಯಪಾಲರಿಗೆ ನಾಲ್ಕು ದೂರುಗಳು ಈಗಾಗಲೇ ದಾಖಲಾಗಿವೆ. ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಅನುಮತಿ ತಡೆ ಕೋರಿ ಹೈಕೋರ್ಟ್ನಲ್ಲಿ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದು, ಗುರುವಾರ ವಿಚಾರಣೆ ನಡೆಯಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ