ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.
ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ ಬಂಧನ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ಬುಧವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಆರೋಪಿಗಳನ್ನು ಪುನಃ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ನಟ ದರ್ಶನ್ ಹಾಗೂ ಇತರರಿಗೆ ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದಾರೆ.
ಜೈಲಿನಲ್ಲಿ ರಾಜಾತಿಥ್ಯ ಪ್ರಕರಣವು ಕೋಲಾಹಲ ಎಬ್ಬಿಸಿದ ನಂತರ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಮತ್ತು ಸಹಚರರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ರಾಜ್ಯದ ಬೇರೆಬೇರೆ ಜೈಲುಗಳಿಗೆ ಸ್ಥಳಾಂತರಿಸಲು ನ್ಯಾಯಾಲಯ ಮಂಗಳವಾರ ಾನುಮತಿ ನೀಡಿದೆ. ಹೀಗಾಗಿ ದರ್ಶನ್ ನನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ