ಮಾನ್ವಿ | ಶಾಲಾ ವಾಹನ-ಬಸ್‌ ಮಧ್ಯೆ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸಾವು, 17 ವಿದ್ಯಾರ್ಥಿಗಳಿಗೆ ಗಾಯ

ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ‌ಕಪಗಲ್ ಗ್ರಾಮದ ಸಮೀಪ ಗುರುವಾರ ಶಾಲಾ ವಾಹನ ಹಾಗೂ ಸಾರಿಗೆ ಸಂಸ್ಥೆಯ ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಶಾಲಾ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಹಾಗೂ  17 ವಿದ್ಯಾರ್ಥಿಗಳು  ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಲೊಯಲ್‌ ಶಾಲೆಯ ವಿದ್ಯಾರ್ಥಿಗಳಾದ ಸಮರ್ಥ ಅಮರೇಶ (7) ಹಾಗೂ ಶ್ರೀಕಾಂತ ಮಾರೇಶ (12) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಒರ್ವ ವಿದ್ಯಾರ್ಥಿ ಹಾಗೂ ಚಾಲನಕನ ಸ್ಥಿತಿ ಗಂಭೀರವಾಗಿದೆ. ಭೀಕರ ಅಪಘಾತದಲ್ಲಿ ಮೂರು ಮಕ್ಕಳ ಕಾಲುಗಳು ಮುರಿದಿವೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಮೂವರು ವಿದ್ಯಾರ್ಥಿಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಲಾ ಮಕ್ಕಳನ್ನು ಕರೆದುಕೊಂಡು ಮಾನ್ವಿಯ ಲೊಯೋಲ್ ಶಾಲೆಗೆ ತೆರಳುತ್ತಿದ್ದ ವಾಹನ ಹಾಗೂ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಮಧ್ಯೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಶಾಲಾ ವಾಹನ ನುಜ್ಜುಗುಜ್ಜಾಗಿದೆ. ಮೂವರು ವಿದ್ಯಾರ್ಥಿಗಳ ಪರಿಸ್ಥಿತಿ ಚಿಂತಾಜನಕವಾಗಿ ಎಂದು ಹೇಳಲಾಗಿದೆ.
ಜಿಲ್ಲಾಧಿಕಾರಿ ನಿತೀಶ ಕೆ. ಆಸ್ಪತ್ರೆಗೆ ಭೇಟಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 40 ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿಗಳು ಮೃತರಾಗಿದ್ದಾರೆ. ಮೂವರ ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ.17 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಗಾಯಗೊಂಡ ಮಕ್ಕಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಎಲ್ಲ ರೀತಿಯಲ್ಲೂ ವೈದ್ಯಕೀಯ ನೆರವು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement