ವಾಲ್ಮೀಕಿ ಹಗರಣ : ಚಾರ್ಜ್ ಶೀಟ್ ಸಲ್ಲಿಸಿದ ಇ.ಡಿ.

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಶಾಸಕರು/ಸಂಸದರ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.
ಮಾಜಿ ಸಚಿವ ನಾಗೇಂದ್ರ ಸೇರಿ 5 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಯಾಗಿದ್ದು ನಾಗೇಂದ್ರ ಅಣತಿಯಂತೆ 187 ಕೋಟಿ ರೂ. ಹಗರಣ ನಡೆದಿದೆ ಎಂದು ಇ.ಡಿ. ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.
ಹೈದರಾಬಾದ್‌ನಲ್ಲಿದ್ದ ಮಧ್ಯವರ್ತಿ ಸತ್ಯನಾರಾಯಣ ವರ್ಮಾ ಜೊತೆ ನಾಗೇಂದ್ರಗೆ ನಿಕಟ ಸಂಪರ್ಕ ಇತ್ತು. ನಾಗೇಂದ್ರನ ಅಣತಿಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ. 21 ಕೋಟಿ ರೂ. ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಕರ್ನಾಟಕ ಪೊಲೀಸ್‌ನ ಅಪರಾಧ ತನಿಖಾ ಇಲಾಖೆ(ಸಿಐಡಿ) ಅಡಿಯಲ್ಲಿ ರಚನೆಯಾಗಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಸಲ್ಲಿಸಿದ ಚಾರ್ಜ್‌ಶೀಟ್‌, ಇಡಿ ಚಾರ್ಜ್ ಶೀಟ್ ಗೆ ವಿರುದ್ಧವಾಗಿದೆ. ಎಸ್ಐಟಿ ಸಲ್ಲಿಸಿದ ಚಾರ್ಜ್ ಶೀಟ್‌ನಲ್ಲಿ ನಾಗೇಂದ್ರ ಅವರ ಹೆಸರಿರಲಿಲ್ಲ.
ಕಳೆದ ತಿಂಗಳು ಎಸ್‌ಐಟಿ, ವಾಲ್ಮೀಕಿ ಹಗರಣ ಮತ್ತು ನಿಗಮದ ಖಾತೆ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಚಾರ್ಜ್ ಶೀಟ್‌ಗಳನ್ನು ಸಲ್ಲಿಸಿತ್ತು.
ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್‌ಐಟಿ ಕಾಂಗ್ರೆಸ್‌ನ ಮಾಜಿ ಸಚಿವ ನಾಗೇಂದ್ರ ಮತ್ತು ಬುಡಕಟ್ಟು ಕಲ್ಯಾಣ ಮಂಡಳಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅವರನ್ನು ರಕ್ಷಿಸುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement