ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ ಕೊಲೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳಿಗೆ ಈಚೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.
ಈ ಪ್ರಕರಣದಲ್ಲಿ 18 ಆರೋಪಿಗಳ ಪೈಕಿ 8 ಮಂದಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದಲ್ಲಿ 6ನೇ ಆರೋಪಿಯಾಗಿರುವ ಬೆಳಗಾವಿಯ ಭರತ ಜಯವಂತ ಕುರಾನೆ, 9ನೇ ಆರೋಪಿ ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಾಲೇಕರ್, 13ನೇ ಆರೋಪಿ ಶಿವಮೊಗ್ಗದ ಶಿಕಾರಿಪುರದ ಸುಜಿತಕುಮಾರ ಹಾಗೂ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ( ಹಿಂದಿನ ಔರಂಗಾಬಾದ್) 16ನೇ ಆರೋಪಿ ಶ್ರೀಕಾಂತ ಪಂಗಾರ್ಕರ್ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್ ವಿಶ್ವಜಿತ ಶೆಟ್ಟಿ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.
ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಣಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲಾ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು. ಅರ್ಜಿದಾರರು ಪ್ರಾಸಿಕ್ಯೂಷನ್ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂಥದ್ದೇ ಆರೋಪದಲ್ಲಿ ಭಾಗಿಯಾಗುವಂತಿಲ್ಲ. ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ಅನುಮತಿಸದ ಹೊರತು ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿ ತೊರೆಯುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ