ನವದೆಹಲಿ :‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಮೂಲಗಳ ಪ್ರಕಾರ, ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ.
ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಬುಧವಾರ ಕೇಂದ್ರ ಸಚಿವ ಸಂಪುಟದ ಮುಂದೆ ತನ್ನ ವರದಿಯನ್ನು ಸಲ್ಲಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇತೃತ್ವದ ಉನ್ನತ ಮಟ್ಟದ ಸಮಿತಿ ಈ ವರ್ಷದ ಮಾರ್ಚ್ 14 ರಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು.
ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ನೇತೃತ್ವದಲ್ಲಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಚಿಸಲಾದ ಸಮಿತಿಯ ವರದಿಯನ್ನು ಅಂಗೀಕರಿಸಿದ ಕೇಂದ್ರ ಸಚಿವ ಸಂಪುಟವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಗೆ ಬುಧವಾರ ಅನುಮೋದನೆ ನೀಡಿದೆ.
‘ಒಂದು ರಾಷ್ಟ್ರ, ಒಂದು ಚುನಾವಣೆ’- ಇದು ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವುದನ್ನು ಪ್ರಸ್ತಾಪಿಸುತ್ತದೆ. ಪ್ರಸ್ತಾವನೆಯನ್ನು ಸಂಸತ್ತಿನ ಮುಂಬರುವ ಅಧಿವೇಶನಲ್ಲಿ ಮಂಡಿಸಲಾಗುತ್ತದೆ. ಇದು ಲೋಕಸಭೆ ಮತ್ತು ರಾಜ್ಯಸಭೆಯ ಎರಡೂ ಸದನಗಳನ್ನು ಅನುಮೋದನೆ ಪಡೆಯಬೇಕು. ಇದಕ್ಕೆ ಸಂವಿಧಾನದ ತಿದ್ದುಪಡಿಯ ಅಗತ್ಯವಿರುತ್ತದೆ ಮತ್ತು ಆ ತಿದ್ದುಪಡಿಯನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅನುಮೋದಿಸಬೇಕಾಗುತ್ತದೆ.
32 ಪಕ್ಷಗಳು ಮತ್ತು ಮಾಜಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್ ನ್ಯಾಯಾಧೀಶರು ಸೇರಿದಂತೆ ನ್ಯಾಯಾಂಗದ ಪ್ರಮುಖ ವ್ಯಕ್ತಿಗಳು ಇದನ್ನು ಬೆಂಬಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕಳೆದ ತಿಂಗಳು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಬಗ್ಗೆ ಪ್ರತಿಪಾದಿಸಿದರು, ಆಗಾಗ್ಗೆ ಚುನಾವಣೆಗಳು ದೇಶದ ಪ್ರಗತಿಗೆ ಅಡ್ಡಿ ಉಂಟುಮಾಡುತ್ತವೆ ಎಂದು ಹೇಳಿದ್ದರು.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದರೇನು ಮತ್ತು ಅದು ಹೇಗೆ ಕೆಲಸ ಮಾಡಬಹುದು…?
‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದನ್ನು ಸೂಚಿಸುತ್ತದೆ, ಅಂದರೆ, ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣೆಗಳನ್ನು ಒಟ್ಟಿಗೆ ನಡೆಸುವುದು ಇದರ ಉದ್ದೇಶ.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ಕಲ್ಪನೆಯನ್ನು ಮೊದಲು 1980 ರ ದಶಕದಲ್ಲಿ ಪ್ರಸ್ತಾಪಿಸಲಾಯಿತು. ನ್ಯಾಯಮೂರ್ತಿ ಬಿ.ಪಿ. ಜೀವನ ರೆಡ್ಡಿ ನೇತೃತ್ವದ ಕಾನೂನು ಆಯೋಗವು ಮೇ 1999 ರಲ್ಲಿ ತನ್ನ 170 ನೇ ವರದಿಯಲ್ಲಿ “ನಾವು ಲೋಕಸಭೆ ಮತ್ತು ಎಲ್ಲಾ ವಿಧಾನಸಭೆಗಳಿಗೆ ಒಂದೇ ಬಾರಿಗೆ ಚುನಾವಣೆ ನಡೆಸುವ ಪರಿಸ್ಥಿತಿಗೆ ಹಿಂತಿರುಗಬೇಕು” ಎಂದು ಹೇಳಿತ್ತು.
1951-52, 1957, 1962 ಮತ್ತು 1967 ರಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆದವು. ಆದರೆ, ವಿಧಾನಸಭೆಗಳು ಅವಧಿಗೆ ಮುಂಚೆಯೇ ವಿಸರ್ಜನೆಗೊಂಡ ನಂತರ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳ ಚುನಾವಣೆಯ ಈ ಚಕ್ರಕ್ಕೆ ಅಡ್ಡಿಯಾಯಿತು. 1970ರಲ್ಲಿ ಲೋಕಸಭೆಯನ್ನೂ ವಿಸರ್ಜನೆ ಮಾಡಲಾಯಿತು.
ಪ್ರತಿಪಕ್ಷಗಳು ‘ಒಂದು ರಾಷ್ಟ್ರ, ಒಂದು ಚುನಾವಣೆ’ಯನ್ನು ವಿರೋಧಿಸುತ್ತವೆ ಯಾಕೆ…?
ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಮತ್ತು ಶಿವಸೇನೆ (ಯುಬಿಟಿ) ಸೇರಿದಂತೆ ಹಲವು ವಿರೋಧ ಪಕ್ಷಗಳು ‘ಒಂದು ರಾಷ್ಟ್ರ, ಒಂದು ಚುನಾವಣೆ’ಯನ್ನು ವಿರೋಧಿಸಿವೆ. ಬಿಜೆಪಿಯು ಸಂಸದೀಯ ವ್ಯವಸ್ಥೆಯ ಸರ್ಕಾರವನ್ನು ಅಧ್ಯಕ್ಷೀಯ ವ್ಯವಸ್ಥೆಗೆ ಬದಲಿಸಲು ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಬಗ್ಗೆ ಪ್ರಸ್ತಾಪಿಸುತ್ತಿದೆ ಎಂದು ಆರೋಪಿಸಿದೆ.
ಪ್ರಸ್ತಾವನೆ ಅಂಗೀಕಾರದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಟಿಎಂಸಿ ಸಂಸದ ಡೆರೆಕ್ ಒ’ಬ್ರೇನ್, “ಒಂದು ರಾಷ್ಟ್ರ, ಒಂದು ಚುನಾವಣೆ ಎಂಬುದು ಪ್ರಜಾಪ್ರಭುತ್ವ ವಿರೋಧಿ ಬಿಜೆಪಿಯ ಮತ್ತೊಂದು ಸ್ಟಂಟ್” ಎಂದು ಹೇಳಿದ್ದಾರೆ.
ಏತನ್ಮಧ್ಯೆ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ಬಿಜೆಪಿಯ ಪ್ರತಿಪಾದನೆ ಮಾಡುತ್ತ ಬಂದಿದ್ದು, ಸ್ವತಃ ಪ್ರಧಾನಿ ಮೋದಿ ಇದರ ನೇತೃತ್ವ ವಹಿಸಿದ್ದರು. ವಾಸ್ತವವಾಗಿ, ಬಿಜೆಪಿ ಪಕ್ಷವು ತನ್ನ ಸಾರ್ವತ್ರಿಕ ಚುನಾವಣೆಯ ಪ್ರಣಾಳಿಕೆಯಲ್ಲಿ ಏಕಕಾಲಕ್ಕೆ ಚುನಾವಣೆಯನ್ನು ಭರವಸೆ ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ