ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ

ಬೆಂಗಳೂರು : ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಪರಿಹಾರ ರೂಪದಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಬುಧವಾರ ಆದೇಶಿಸಿದೆ. ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸಲು ಆದೇಶಿಸಲಾಗಿದೆ.
ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿನ ಆರೋಪಿತ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದನ್ನು ಹೈಕೋರ್ಟ್​ ಎತ್ತಿ ಹಿಡಿದಿತ್ತು. ಅಲ್ಲದೆ, ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ತನ್ನ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿತ್ತು. ಇದರ ಮಾರನೇ ದಿನವಾದ ಬುಧವಾರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ನೇತೃತ್ವದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಬಿದ್ದಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ನಡೆಸಿದರು. ಹೈಕೋರ್ಟ್‌ ಮಂಗಳವಾರದ ಆದೇಶದಲ್ಲಿ ಮೇಲ್ನೋಟಕ್ಕೆ ತನಿಖೆಯ ಅಗತ್ಯತೆ ಪ್ರತಿಪಾದಿಸಿರುವುದನ್ನು ಉಲ್ಲೇಖಿಸಿರುವ ವಿಶೇಷ ವಿಚಾರಣಾಧೀನ ನ್ಯಾಯಾಲಯವು ಡಿಸೆಂಬರ್‌ 24ರ ಒಳಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಮೈಸೂರಿನ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿಗೆ ಆದೇಶಿಸಿದೆ. ಸಿಆರ್‌ಪಿಸಿ ಸೆಕ್ಷನ್‌ 156(3)ರ ಅಡಿ ತನಿಖೆಗೆ ಸೂಚಿಸಲು ಇರುವ ಅಧಿಕಾರವನ್ನು ಬಳಸಿ ನ್ಯಾಯಾಲಯ ಈ ನಿರ್ದೇಶನ ನೀಡಿದೆ. ಹೀಗಾಗಿ ಸಿದ್ದರಾಮಯ್ಯ ಸೇರಿ ಇತರೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಲಿದೆ.

ಪ್ರಮುಖ ಸುದ್ದಿ :-   ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

ಇದಕ್ಕೂ ಮುನ್ನ, ರಾಜ್ಯಪಾಲರು ತನಿಖೆ ಅನುಮತಿ ನೀಡಿರುವುದನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ ಆದೇಶದ ಪ್ರತಿಯನ್ನು ಅರ್ಜಿದಾರರ ಪರ ಹಿರಿಯ ವಕೀಲರಾದ ಲಕ್ಷ್ಮಿ ಐಯ್ಯಂಗಾರ್‌ ಅವರು ನ್ಯಾಯಾಲಯಕ್ಕೆ ಸಲ್ಲಿಸಿದರು.ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಮುಖ್ಯಮಂತ್ರಿ ಸಿದ್ದಾರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಜೆ ದೇವರಾಜು ಹಾಗೂ ಇತರೆ ಹೆಸರಿನಡಿ ಐವರನ್ನು ಆರೋಪಿಗಳನ್ನಾಗಿಸಲಾಗಿದೆ. ಮಂಗಳವಾರ ಹೈಕೋರ್ಟ್​ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಆರ್​ಪಿಸಿ ಕಾಯ್ದೆ ಉಲ್ಲೇಖಿಸಿ ತೀರ್ಪು ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement