ಮುಡಾ ಹಗರಣ | ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ : ಕಾಂಗ್ರೆಸ್‌ ನಾಯಕನಿಂದಲೇ ಒತ್ತಾಯ

ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸುವೆ. ಈಗ ಆಡಳಿತ ಪಕ್ಷವಾದ ಕಾಂಗ್ರೆಸ್‌ ನಾಯಕನಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉತ್ತಮ ಎಂದು ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಲ್ಲಿ ಗುರುವಾರ ಮಾತನಾಡಿದ ಅವರು, ಪಕ್ಷಕ್ಕಾಗುವ ಮುಜುಗರ ತಪ್ಪಿಸಲು ತನಿಖೆ ಮುಗಿಯುವ ತನಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ತನಿಖೆಯಲ್ಲಿ ಆರೋಪ ಮುಕ್ತರಾದ ಬಳಿಕ ಅವರು ಮತ್ತೆ ಮುಖ್ಯಮಂತ್ರಿ ಆಗಿ ಮುಂದುವರಿಯಲಿ ಎಂದು ಒತ್ತಾಯಿಸಿದ್ದಾರೆ.

ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರ ಪ್ರಸ್ತಾಪಿಸಿ ಪ್ರತಿಪಕ್ಷಗಳು ರಾಜೀನಾಮೆ ವಿಚಾರ ಬಗ್ಗೆ ಮಾತನಾಡುತ್ತಿವೆ. ಪ್ರಧಾನಿ ಮೋದಿ ಹರಿಯಾಣ ರಾಜ್ಯದಲ್ಲಿ ಚುನಾವಣಾ ಪ್ರಚಾರ ವೇಳೆ ಈ ವಿಚಾರ ಪ್ರಸ್ತಾಪಿಸುತ್ತಿದ್ದಾರೆ. ಹೀಗಾಗಿ ಪಕ್ಷಕ್ಕೆ ಮುಜುಗರ ಉಂಟಾಗುತ್ತಿದೆ. ಆದ್ದರಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಚುನಾವಣೆ ವೇಳೆ ಪಕ್ಷಕ್ಕೆ ಮುಜುಗರ ತಪ್ಪುತ್ತದೆ ಎಂದು ಹೇಳಿದರು.
40 ವರ್ಷಗಳ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯ ಕಪ್ಪುಚುಕ್ಕೆ ಇಲ್ಲದೆ ಕಳಂಕರಹಿತರಾಗಿದ್ದಾರೆ. ಹೈಕಮಾಂಡ್‌ ಸೇರಿದಂತೆ 136 ಶಾಸಕರ ಸಂಪೂರ್ಣ ಬೆಂಬಲವೂ ಅವರಿಗೆ ಇದೆ. ಅವರು ನಿರ್ದೋಷಿ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ ಹಾಗೂ ಜೆಡಿಎಸ್‌ನವರ ರಾಜಕೀಯ ಪಿತೂರಿಯಿಂದಾಗಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ವ್ಯಕ್ತಿಗಳಿಂದ ದೂರು ಕೊಡಿಸಿದ್ದಾರೆ. ವಿಚಾರಣೆ ನಡೆದ ಬಳಿಕ ಅವರು ನಿರ್ದೋಷಿಯಾಗಿ ಹೊರಬರುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಇದು ನನ್ನ ವೈಯುಕ್ತಿಕ ಅಭಿಪ್ರಾಯ. ಸದ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಮುಗಿದ ಬಳಿಕ ಅವರು ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಸಲಹೆ ನೀಡಿದರು.

ಪ್ರಮುಖ ಸುದ್ದಿ :-   ವಿಪರೀತ ಮಳೆ: ನಾಳೆ (ಅ.16) ಬೆಂಗಳೂರಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement