ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎನ್. ಪಾರ್ವತಿ ಅವರು ತಮ್ಮ ಕುಟುಂಬದ ವಿರುದ್ಧದ ಪ್ರಕರಣಗಳ ಕೇಂದ್ರ ಬಿಂದುವಾಗಿರುವ ಭೂಮಿಯನ್ನು ಹಿಂದಿರುಗಿಸುವುದಾಗಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ಕ್ಕೆ ಪತ್ರ ಬರೆದಿದ್ದಾರೆ.
ತನ್ನ ಆತ್ಮಸಾಕ್ಷಿಯಂತೆ ನಡೆಯುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಈ ಪ್ಲಾಟ್ಗಳನ್ನು ಹಿಂದಿರುಗಿಸುವುದರ ಜೊತೆಗೆ, ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗೆ ನಾನು ಒತ್ತಾಯಿಸುತ್ತೇನೆ” ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಸೋಮವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿತ್ತು. ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ಇತ್ತೀಚಿಗೆ ದಾಖಲಾಗಿದ್ದ ಲೋಕಾಯುಕ್ತ ಎಫ್ಐಆರ್ ಅನ್ನು ಆಧರಿಸಿ ಇಡಿ ECIR ದಾಖಲಿಸಿದ ಬೆನ್ನಲ್ಲೇ ಪಾರ್ವತಿಯವರು 14 ನಿವೇಶಗಳನ್ನು ಮುಡಾಗೆ ಹಿಂತಿರುಗಿಸುವುದಾಗಿ ಮುಡಾಕ್ಕೆ ಪತ್ರ ಬರೆದಿದ್ದಾರೆ.
ಮುಡಾಕ್ಕೆ ಬರೆದ ಪತ್ರದಲ್ಲಿ, ಪಾರ್ವತಿ ಅವರು, ಮೈಸೂರಿನ ಕೆಸರೆ ಗ್ರಾಮದಲ್ಲಿ 3.16 ಎಕರೆ ಜಮೀನು ಬಳಕೆಗೆ ಬದಲಿಗೆ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ತಮಗೆ ಮಂಜೂರು ಮಾಡಲಾದ 14 ನಿವೇಶನಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ.
“ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ಪ್ಲಾಟ್ಗಳ ಕರಾರುಗಳನ್ನು ರದ್ದುಪಡಿಸುವ ಮೂಲಕ ಪರಿಹಾರದ ನಿವೇಶನಗಳನ್ನು ಹಿಂದಿರುಗಿಸಲು ನಾನು ಬಯಸುತ್ತೇನೆ” ಎಂದು ಮುಡಾಗೆ ಅವರು ಬರೆದ ಪತ್ರ ಹೇಳಿದೆ. “ನಾನು ನಿವೇಶನಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸುತ್ತಿದ್ದೇನೆ, ದಯವಿಟ್ಟು ಆದಷ್ಟು ಬೇಗ ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಪಾರ್ವತಿ ಅವರ ಪತ್ರದ ಪೂರ್ಣ ಸಾರಾಂಶ :
ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು.
ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು.
ನನ್ನ ಪತಿಗೆ ರಾಜ್ಯದ ಜನತೆ ಹರಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು.
ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ.
ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ. ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ.
ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ.
ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ. ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ.
ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಶ್ರೀಕಂಠ ಬಾಳಗಂಚಿ
ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು. ಈಗ ನಿವೇಶನಗಳನ್ನು ಹಿಂದಿರುಗಿಸಿದರೂ ಹೋದ ಮಾನ ಮತ್ತೆ ಬಾರದು.
ಆರಂಭದಲ್ಲಿ ಇದೇ ಪ್ರಶ್ನೆಯನ್ನು ಪತ್ರಕರ್ತರು ಕೇಳಿದ್ದಾಗ ಹುಂಬ ಸಿದ್ದು, ಏಯ್ ಸುಮ್ನೆ ಆಚೆಗೋಗ್ ಎಂದು ಗದುರಿಸಿದ್ದ.
ಯಾವಾಗ ತನ್ನ ಬುಡಕ್ಕೇ ಬೆಂಕಿ ಬಿತ್ತೋ ಆವಾಗ ಈ ರೀತಿಯಾಗಿ ನಾಟಕ ಆಡಿದರೆ ಜನಾ ನಂಬೋದಿಲ್ಲಾ ಬಿಡಿ
HM SADANANDA
ವಿನಾಶಕಾಲೇ ವಿಪರೀತ ಬುದ್ಧಿ! ಅಲ್ಲಮ್ಮಾ ಈ ಕೆಲಸವನ್ನು ಅಂದೇ ಮಾಡಿದ್ದಿದ್ದರೆ ಮಾನವಾದರೂ ಉಳಿಯುತ್ತಿತ್ತಲ್ಲ್ಲಾ! ಅಂದ ಹಾಗೆ ರಾಜ್ಯದ ಬೊಕ್ಲಸದಿಂದ ಅಭಿಶೇಕ್ ಮನು ಸಿಂಘ್ವಿ ಯವರಿಗೆ ಕೊಟ್ಟ ದುಡ್ಡನ್ನೂ ವಾಪಾಸ್ ಕೊಡಬೇಕಲ್ಲ ಬಡ್ಡಿ ಸಮೇತ! ಅದನ್ನೂ ಮಾಡಿಬಿಡಿ ದೇವರು ಕ್ಷಮಿಸಿಯಾನು ನಿಮ್ಮನ್ನು ಮಾತ್ರ!