ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆ ರೆಪೋ ದರ (Repo Rate)ವನ್ನು ಶೇ. 6.5ರಲ್ಲಿಯೇ ಮುಂದುವರಿಸಲು ನಿರ್ಧರಿಸಿದೆ.
ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರೆಪೋ ದರ ಸದ್ಯಕ್ಕೆ ಇಳಿಕೆ ಮಾಡುವುದು ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿ (Monetary Policy Committee) ಹೆಚ್ಚಿನ ಸದಸ್ಯರು ಅಭಿಪ್ರಾಯಪಟ್ಟ ನಂತರ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ರೆಪೊ ದರ ನಿರ್ಧಾರವನ್ನು 5:1 ಬಹುಮತದೊಂದಿಗೆ ತೆಗೆದುಕೊಳ್ಳಲಾಗಿದೆ.
ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ಪ್ರತೀ ಎರಡು ತಿಂಗಳಿಗೊಮ್ಮೆ ನಡೆಸುವ ಮಾನಿಟರಿ ಪಾಲಿಸಿ ಕಮಿಟಿ ಸಭೆ ಅಕ್ಟೋಬರ್ 7ರಂದು ಆರಂಭವಾಗಿತ್ತು. 3 ದಿನ ನಡೆದ ಈ ಸಭೆಯಲ್ಲಿ ಕೈಗೊಂಡ ತೀರ್ಮಾನವನ್ನು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ರೆಪೋ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆರ್ಬಿಐ ಕೊನೆಯ ಬಾರಿಗೆ 2023ರ ಫೆಬ್ರವರಿಯಲ್ಲಿ ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಏರಿಕೆ ಮಾಡಿತ್ತು. ಹಿಂದಿನ 9 ಸಭೆಗಳಲ್ಲಿಯೂ ಯಥಾಸ್ಥಿತಿ ಕಾಯ್ದುಕೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಈ ಬಾರಿಯೂ ಅದನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ. ಸದ್ಯಕ್ಕೆ ಹಣದುಬ್ಬರವನ್ನು ನಿಯಂತ್ರಿಸುವುದೇ ಆರ್ಬಿಐಯ ಪ್ರಮುಖ ಗುರಿಯಾಗಿದೆ. ಪ್ರಸ್ತುತ ಹಣದುಬ್ಬರ ದರ ಆರ್ಬಿಐಯ ಗುರಿಯಾದ ಶೇ. 4ಕ್ಕಿಂತ ಹೆಚ್ಚಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ