ಚೆನ್ನೈ: ತಮಿಳುನಾಡಿನಲ್ಲಿ ಶುಕ್ರವಾರ ರಾತ್ರಿ ಪ್ಯಾಸೆಂಜರ್ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ(Train Accident) ಹೊಡೆದಿದ್ದು, 19 ಮಂದಿ ಗಾಯಗೊಂಡಿದ್ದಾರೆ. ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್ ಅನ್ನು ಪ್ರವೇಶಿಸಿದ ಪರಿಣಾಮ ಕನಿಷ್ಠ 12 ಬೋಗಿಗಳು ಹಳಿತಪ್ಪಿದವು, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ 8:30ರ ಸುಮಾರಿಗೆ ನಡೆದಿದೆ
ಚೆನ್ನೈ ಸಮೀಪದ ತಿರುವಳ್ಳೂರು ಜಿಲ್ಲೆಯ ಕವರೈಪ್ಪೆಟ್ಟೈ ರೈಲು ನಿಲ್ದಾಣದ ಬಳಿ ಮೈಸೂರು – ದರ್ಭಾಂಗ ಬಾಗ್ಮತಿ ಎಕ್ಸ್ಪ್ರೆಸ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಹಳಿತಪ್ಪಿದ ಬಾಗ್ಮತಿ ಎಕ್ಸ್ಪ್ರೆಸ್ನ ಬೋಗಿಗಳಲ್ಲಿ ಸಿಲುಕಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೈಸೂರು – ದರ್ಭಾಂಗ ಬಾಗ್ಮತಿ ಎಕ್ಸ್ಪ್ರೆಸ್ ರೈಲಿನಲ್ಲಿ 1,360 ಪ್ರಯಾಣಿಕರು ಇದ್ದರು. 19 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಈವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿರುವಳ್ಳೂರು ಜಿಲ್ಲಾಧಿಕಾರಿ ಡಾ.ಟಿ.ಪ್ರಭುಶಂಕರ ತಿಳಿಸಿದ್ದಾರೆ.
ರೈಲಿನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಎಂಟಿಸಿ ಬಸ್ಗಳ ಮೂಲಕ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣಕ್ಕೆ ಸಾಗಿಸಲಾಯಿತು. ಮುಂಜಾನೆ, ವಿಶೇಷ ರೈಲು ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ನಿಂದ ಹೊರಟು, ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ಕರೆದೊಯ್ಯಿತು. ಪ್ರಯಾಣಿಕರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಈ ಘಟನೆಯಿಂದಾಗಿ ಶನಿವಾರ 18 ರೈಲು ಸಂಚಾರ ರದ್ದುಗೊಳಿಸಲಾಗಿದೆ. ಅಪಘಾತದ ಕುರಿತು ರೈಲ್ವೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಆಘಾತ ವ್ಯಕ್ತಪಡಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ