ನವದೆಹಲಿ: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 47 ವಿಧಾನಸಭಾ ಕ್ಷೇತ್ರ ಮತ್ತು ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದೆ.
ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದ್ದು, ನ.23 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ತಿಳಿಸಿದ್ದಾರೆ.
ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆ ದಿನವಾಗಿದೆ. ಅಕ್ಟೋಬರ್ 28ರಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 30ರಂದು ಕೊನೆ ದಿನವಾಗಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಂಡ್ಯದಿಂದ ಸಂಸದರಾಗಿ ಆಯ್ಕೆಯಾಗಿದ್ದರಿಂದ ಚನ್ನಪಟ್ಟಣ ಕ್ಷೇತ್ರ ತೆರವಾಗಿದೆ. ಹಾವೇರಿಯಿಂದ ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾಗಿದ್ದರಿಂದ ಶಿಗ್ಗಾಂವಿ ಕ್ಷೇತ್ರ ತೆರವಾಗಿದ್ದರೆ ಬಳ್ಳಾರಿಯಿಂದ ಇ.ತುಕಾರಾಂ ಸಂಸದರಾಗಿ ಆಯ್ಕೆಯಾಗಿದ್ದರಿಂದ ಸಂಡೂರು ಕ್ಷೇತ್ರ ತೆರವಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ