ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರ ಜಾಮೀನು ನೀಡಿದೆ. ಇದೇ ಪ್ರಕರಣದಲ್ಲಿ ಇತರೆ ಮೂವರು ಆರೋಪಿಗಳಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ.
ಮಾಜಿ ಸಚಿವ ಮುನಿರತ್ನ ಅವರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಪುರಸ್ಕರಿಸಿದ್ದಾರೆ . ಹಾಗೂ ಆರೋಪಿಗಳಾದ ಡಿ ವಿಜಯಕುಮಾಯ, ಪಿ ಶ್ರೀನಿವಾಸ, ಆರ್ ಸುಧಾಕರ ಅವರ ನಿರೀಕ್ಷಣಾ ಜಾಮೀನು ಮಂಜೂರಿ ಮಾಡಿದ್ದಾರೆ .
ಮುನಿರತ್ನ ಅವರು ೧ ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೌಲ್ಯದ ಇಬ್ಬರ ಭದ್ರತೆ ಒದಗಿಸಬೇಕು. ಪ್ರಾಸಿಕ್ಯೂಷನ್ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ತನಿಖಾಧಿಕಾರಿ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು. ಯಾವುದೇ ರೀತಿಯಲ್ಲೂ ತನಿಖೆ ಮತ್ತು ಸಾಕ್ಷ್ಯ ತಿರುಚುವ ಕೃತ್ಯದಲ್ಲಿ ಭಾಗಿಯಾಗಬಾರದು. ಇಂಥದ್ದೇ ಬೇರೆ ಅಪರಾಧದಲ್ಲಿ ಭಾಗಿಯಾಗುವಂತಿಲ್ಲ ಎಂದು ಷರತ್ತು ವಿಧಿಸಲಾಗಿದೆ.
ಆರೋಪ ಪಟ್ಟಿ ಸಲ್ಲಿಸುವವರೆಗೆ ಅಥವಾ ಮೂರು ತಿಂಗಳವರೆಗೆ ಮುನಿರತ್ನ ಅವರು ಪ್ರತಿ ತಿಂಗಳ ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 5ರ ನಡುವೆ ಸಂಬಂಧಿತ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕಬೇಕು. ನ್ಯಾಯಾಲಯದ ಅನುಮತಿ ಪಡೆಯದೇ ಅರ್ಜಿದಾರರು ನ್ಯಾಯಾಲಯದ ವ್ಯಾಪ್ತಿಯಿಂದ ಹೊರಹೋಗುವಂತಿಲ್ಲ ಎಂಬ ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ. ಇದೇ ಷರತ್ತುಗಳನ್ನು ಆರೋಪಿಗಳಾದಇತರ ಮೂವರು ಆರೋಪಿಗಳಿಗೂ ನ್ಯಾಯಾಲಯ ಅನ್ವಯಿಸಿದೆ.
ಇತರ ಎರಡು ಪ್ರಕರಣಗಳಲ್ಲಿ ಈಗಾಗಲೇ ಮುನಿರತ್ನ ಅವರಿಗೆ ಜಾಮೀನು ದೊರೆತಿರುವುದರಿಂದ ಅವರು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಬಿಜೆಪಿ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆಯಲ್ಲಿ ಮಾಜಿ ಸಚಿವ ಮುನಿರತ್ನ ಸೇರಿ ಆರು ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ