ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಮತ್ತು ಇತರ ಸದಸ್ಯರ ಮೇಲಿನ ಮುಡಾ ಭೂ ಹಗರಣದ ಆರೋಪಗಳ ಕುರಿತು ಲೋಕಾಯುಕ್ತ ತನಿಖೆ ನಡೆಯುತ್ತಿರುವ ಮಧ್ಯೆಯೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದ ಅಧ್ಯಕ್ಷ ಕೆ. ಮರಿಗೌಡ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮರೀಗೌಡ ಅವರು ಬುಧವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಕಾವೇರಿ ನಿವಾಸದಲ್ಲಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.
“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ರಾಜೀನಾಮೆ ನೀಡುವಂತೆ ಸೂಚಿಸಿದರು ಮತ್ತು ಅವರ ನಿರ್ದೇಶನದ ಮೇರೆಗೆ ನಾನು ರಾಜೀನಾಮೆ ನೀಡಿದ್ದೇನೆ. ನನಗೂ ಆರೋಗ್ಯದ ಕಾಳಜಿ ಇದೆ. ನ್ಯಾಯಾಂಗ ತನಿಖೆ ನಡೆಯುತ್ತಿದೆ ಮತ್ತು ಅದು ಮುಂದುವರಿಯುತ್ತದೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ನನ್ನ ಮೇಲೆ ಯಾವುದೇ ಒತ್ತಡ ಇಲ್ಲ. ನನಗೆ ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ಕೊಟ್ಟಿದ್ದೇನೆ. ನನಗೆ ಎರಡು ಬಾರಿ ಪಾರ್ಶ್ವವಾಯು ಆಗಿತ್ತು. ಹೀಗಾಗಿ ನಾನು ಮುಂದುವರಿಯಲು ಸಾಧ್ಯವಿಲ್ಲ ಎಂದು ನಾನು ಭಾವಿಸಿದೆ … ಆದ್ದರಿಂದ ನಾನು ರಾಜೀನಾಮೆ ನೀಡಿದ್ದೇನೆ ಎಂದರು.
ಸೈಟ್ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಮೇಲೆ ಯಾವುದೇ ಒತ್ತಡ ಹಾಕಿಲ್ಲ. ಮುಡಾ ಅಕ್ರಮ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ನಿಖೆಯಿಂದ ಸತ್ಯ ಹೊರಬರಲಿದೆ ಎಂದು ತಿಳಿಸಿದರು.
ಕೆ. ಮರಿ ಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೀರ್ಘಾವಧಿಯ ಸಹವರ್ತಿ ಮತ್ತು 1983 ರಿಂದ ಅವರೊಂದಿಗೆ ಕೆಲಸ ಮಾಡಿದ್ದಾರೆ; ಅವರು 1995 ರಲ್ಲಿ ಮೈಸೂರು ತಾಲೂಕು ಪಂಚಾಯತ ಅಧ್ಯಕ್ಷರಾಗಿದ್ದರು, 2000 ರಲ್ಲಿ ಜಿಲ್ಲಾ ಪಂಚಾಯತ ಉಪಾಧ್ಯಕ್ಷರಾಗಿದ್ದರು. ಮರಿ ಗೌಡ ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ನಿಮ್ಮ ಕಾಮೆಂಟ್ ಬರೆಯಿರಿ