ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ (S M Krishna) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ವಯೋಸಹಜ ತೊಡಕಿನ ಹಿನ್ನೆಲೆಯಲ್ಲಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ಮಣಿಪಾಲ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. 92 ವರ್ಷದ ಎಸ್.ಎಂ. ಕೃಷ್ಣ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಡಾ. ಸತ್ಯನಾರಾಯಣ ಹಾಗೂ ಸುನಿಲ ಕಾರಂತ ನೇತೃತ್ವದ ತಂಡ ಚಿಕಿತ್ಸೆ ನಡೆಸುತ್ತಿದೆ ಎಂದು ಹೇಳಲಾಗಿದೆ.
ಈ ಹಿಂದೆ ಶ್ವಾಸಕೋಶ ಸಮಸ್ಯೆಯಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಎಸ್.ಎಂ ಕೃಷ್ಣ ಚಿಕಿತ್ಸೆ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದೀಗ ಮತ್ತೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಜ್ಯದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಎಸ್.ಎಂ. ಕೃಷ್ಣ ಅವರು 1999 ರಿಂದ 2004ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ನಂತರ 2004ರಿಂದ 2008ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಬಳಿಕ 2009ರಿಂದ ಅಕ್ಟೋಬರ್ 2012ರವರೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಳಿಕ 2017ರ ಮಾರ್ಚ್ನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ