
ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆಯುತ್ತಿದ್ದು, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ. ಅದೇರೀತಿ ಬಳ್ಳಾರಿ ಜಿಲ್ಲೆಯ ಸಂಡೂರು ಬಂಗಾರು ಹನುಮಂತು ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಹೈವೋಲ್ಟೇಜ್ ಕ್ಷೇತ್ರವಾದ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಘೋಷಣೆಯಾಗಿಲ್ಲ.
ಸಂಸದ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರವಾಗಿದ್ದ ಶಿಗ್ಗವಾಇ ಕ್ಷೇತ್ರದಲ್ಲಿ ಬಿಜೆಪಿ ಅವರ ಪುತ್ರ ಭರತ್ ಅವರಿಗೆ ಮಣೆ ಹಾಕಿದೆ. ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಬಸವರಾಜ ಬೊಮ್ಮಾಯಿ ಸಫಲರಾಗಿದ್ದಾರೆ. ಹಾವೇರಿ ಕ್ಷೇತ್ರದ ಸಂಸದರಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದರು. ಸಂಸದರಾಗಿ ಆಯ್ಕೆ ಹಿನ್ನೆಲೆ ಅವರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಂಗಾರು ಹನುಮಂತು ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಸಂಡೂರು ಶಾಸಕರಾಗಿದ್ದ ಕಾಂಗ್ರೆಸ್ ಪಕ್ಷದ ಇ.ತುಕಾರಾಮ್ ಆಯ್ಕೆಯಾಗಿದ್ದರು. ಹೀಗಾಗಿ ಶಾಸಕ ಸ್ಥಾನಕ್ಕೆ ತುಕಾರಾಮ್ ರಾಜೀನಾಮೆ ನೀಡಿದ್ದರು. ಹೀಗಾಗಿ ಸಂಡೂರು ಕ್ಷೇತ್ರ ತೆರವಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ