ಬೆಂಗಳೂರು: ರಾಜ್ಯದಲ್ಲಿ 13.87 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ರದ್ದುಪಡಿಸುವ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ನಿಯಮಾವಳಿಗೆ ವಿರುದ್ಧವಾಗಿ ಒಟ್ಟು 4,036 ಸರಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿರುವುದನ್ನು ಪತ್ತೆ ಮಾಡಲಾಗಿದೆ. ಈಗಾಗಲೇ 2,964 ಕುಟುಂಬಗಳ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದ್ದು, ಉಳಿದವುಗಳ ಪರಿಶೀಲನೆ ನಡೆಯುತ್ತಿದೆ. ಅನ್ನಭಾಗ್ಯ ಯೋಜನೆ ದುರ್ಬಳಕೆ ಮಾಡಿಕೊಂಡಿರುವ ಈ ಕಾರ್ಡ್‌ದಾರರಿಗೆ ದಂಡ ವಿಧಿಸಿ ಕಾನೂನು ಕ್ರಮ ಜರುಗಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ 6 ತಿಂಗಳಿನಿಂದಆದಾಯ ತೆರಿಗೆ ಪಾವತಿಸುವ 98,458 ಕುಟುಂಬಗಳು, ಆದಾಯ ಮಿತಿ ಜಾಸ್ತಿ ಇರುವ 10,09,479 ಕುಟುಂಬಗಳು, ಪಡಿತರ ಪಡೆಯದ 2.75 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್‌ಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 13,87,639 ಕಾರ್ಡ್‌ಗಳನ್ನು ಅನರ್ಹ ಎಂದು ಗುರುತಿಸಲಾಗಿದೆ. ಈ ಪೈಕಿ 3.63 ಲಕ್ಷಕ್ಕೂ ಹೆಚ್ಚು ಕಾರ್ಡ್‌ಗಳನ್ನು ಈಗಾಗಲೇ ರದ್ದು ಮಾಡಲಾಗಿದೆ. 10.38 ಲಕ್ಷಕ್ಕೂ ಅಧಿಕ ಕಾರ್ಡ್‌ಗಳನ್ನು ರದ್ದುಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಈ ತೀರ್ಮಾನದಿಂದ ಒಟ್ಟು 18.70 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಬಿಪಿಎಲ್ ಪಟ್ಟಿಯಿಂದ ಹೊರಗೆ ಹೋಗಲಿದ್ದಾರೆ ಎಂದು ತಿಳಿಸಿದರು.
ಕೇಂದ್ರದಿಂದ 4.01 ಕೋಟಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬರುತ್ತಿದೆ. ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 12.22 ಲಕ್ಷ ಕಾರ್ಡ್‌ಗಳನ್ನು ನೀಡಿದ್ದು, ಇವುಗಳಿಗೆ ಬೇಕಾಗುವ ಫಲಾನುಭವಿಗಳಿಗೆ ಬೇಕಾಗುವ 20 ಸಾವಿರ ಮೆಟ್ರಿಕ್ ಟನ್ ಅಕ್ಕಿಯನ್ನು ಕೇಂದ್ರದ ಒಎಂಎಸ್‌ಎಸ್(ಡಿ) ಯೋಜನೆಯಡಿ ಕಿ.ಲೋ.ಗೆ 28 ರೂ. ಗಳಂತೆಭಾರತೀಯ ಆಹಾರ ನಿಗಮದ ಮೂಲಕ ಖರೀದಿಸಲು ನಿರ್ಧರಿಸಲಾಗಿದ್ದು, ನವೆಂಬರ್ ತಿಂಗಳಿನಿಂದ ಹಂಚಿಕೆ ಮಾಡಲು ನಿರ್ಧರಿಸಿದೆ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ