ಬೆಂಗಳೂರು: ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮಂಗಳವಾರ ಸುರಿಯುತ್ತಿರುವ ಮಳೆಯ ಪರಿಣಾಮ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದು ಬಿದ್ದಿದೆ. ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರಬಹುದು ಎಂದು ಶಂಕಿಸಲಾಗಿದೆ.
ಅಗ್ನಿಶಾಮಕ ದಳ, ಪೊಲೀಸರು ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರ ತೆಗೆದಿದ್ದಾರೆ ಹಾಗೂ ಮೂವರನ್ನು ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. ಸಿಲುಕಿರುವ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಕಟ್ಟಡ ಕುಸಿಯುತ್ತಿದ್ದಂತೆ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಕಾರ್ಮಿಕನೊಬ್ಬನ ತಲೆಗೆ ಏಟು ಬಿದ್ದು, ಕಷ್ಟಪಟ್ಟು ಹೊರ ಬಂದು ಒಳಗೆ ಇನ್ನೂ ಕಾರ್ಮಿಕರು ಸಿಲುಕಿದ್ದಾರೆ ಎಂದು ಮಾಹಿತಿ ನೀಡಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಸಂದರ್ಭದಲ್ಲೇ ಈ ಘಟನೆ ನಡೆದಿದೆ. ಕಟ್ಟಡ ಕುಸಿದು ಬಿದ್ದ ಕ್ಷಣದ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡವು ಕಾರ್ಡ್‌ಗಳ ಮನೆಯಂತೆ ಕುಸಿಯುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಇಡೀ ಕಟ್ಟಡವು ಕುಸಿದುಬಿದ್ದಿದೆ. ಸಮಯವಿಲ್ಲದ ಕಾರಣ ಇನ್ನೂ ಅನೇಕರು ಜನರು ಅದರ ಅಡಿಯಲ್ಲಿ ಸಿಲುಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಟ್ಟಡ ಕುಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಸ್ಥಳಕ್ಕೆ ಸ್ಥಳೀಯ ಶಾಸಕ ಭೈರತಿ ಸುರೇಶ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಗಮನಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಕಾರ್ಯಾಚರಣೆಗೆ ಅಗತ್ಯ ನೆರವು ನೀಡುವುದಾಗಿ ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ