ಪ್ರಜ್ವಲ್ ರೇವಣ್ಣ ಮೂರು ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.
ಪ್ರಜ್ವಲ್‌ ವಿರುದ್ಧ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. ಈ ಪೈಕಿ ಮೂರು ಪ್ರಕರಣಗಳಲ್ಲಿ ಪ್ರಜ್ವಲ್‌ ಜಾಮೀನು ಕೋರಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೋಮವಾರ ವಜಾ ಮಾಡಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮನೆಕೆಲಸದಾಕೆ ನೀಡಿರುವ ದೂರಿನ ಅನ್ವಯ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿದ್ದರು. ಈ ಪ್ರಕರಣದಲ್ಲಿ ಪ್ರಜ್ವಲ್‌ ಎರಡನೇ ಆರೋಪಿಯಾಗಿದ್ದಾರೆ. ಮೊದಲನೇ ಆರೋಪಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ಈಗಾಗಲೇ ಜಾಮೀನು ಮಂಜೂರಾಗಿದೆ.

ಬೆಂಗಳೂರಿನ ಸಿಐಡಿ ಸೈಬರ್‌ ಠಾಣೆಯಲ್ಲಿ ದಾಖಲಾದ ಪ್ರಕರಣಗಳಾದ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿನ ಕೆಲಸದಾಕೆಯ ದೂರಿನ ಅನ್ವಯ ದಾಖಲಾಗಿರುವ ಅತ್ಯಾಚಾರ ಪ್ರಕರಣ ಮತ್ತು ಹಾಸನದ ಮಹಿಳೆಯ ನಗ್ನ ಚಿತ್ರ/ವಿಡಿಯೊ ಸೆರೆ ಹಿಡಿದ ಆರೋಪಕ್ಕೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಪ್ರಜ್ವಲ್‌ ಅರ್ಜಿಗಳನ್ನು ಹೈಕೋರ್ಟ್‌ ತಿರಸ್ಕರಿಸಿದೆ.
ಹಾಸನ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಇನ್ನೆರಡು ದಿನದಲ್ಲಿ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದೆ.
ಪ್ರಜ್ವಲ್‌ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದಿಸಿದ್ದರು. ರಾಜ್ಯ ಸರ್ಕಾರದ ವಿಶೇಷ ತನಿಖಾ ದಳದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮಕುಮಾರ ವಾದ ಮಂಡಿಸಿದ್ದರು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement