ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 545 ಪಿಎಸ್ಐ ನೇಮಕಾತಿಗೆ ಸಂಬಂಧಿಸಿದಂತೆ ಗೃಹ ಇಲಾಖೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.
ನಾಲ್ಕು ವರ್ಷಗಳ ಹಿಂದೆ 545 ಪಿಎಸ್ಐ ನೇಮಕಾತಿ ಸಂಬಂಧ ಅಧಿಸೂಚನೆ ಹೊರಡಿಸಿ, ಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಆದರೆ, ಈ ಪರೀಕ್ಷೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಬಗ್ಗೆ ಎಸ್ಐಟಿ ತನಿಖೆಗೆ ಆದೇಶಿಸಿತ್ತು. ತನಿಖೆ ವೇಳೆ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ಪೊಲೀಸ್ ನೇಮಕಾತಿ ವಿಭಾಗದ ಅಂದಿನ ಎಡಿಜಿಪಿ ಅಮೃತ್ ಪೌಲ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳು ಹಾಗೂ ಪಿಎಸ್ಐ ಪರೀಕ್ಷಾ ಆಕಾಂಕ್ಷಿಗಳು ಸೇರಿದಂತೆ ಸಹಿತ ಹಲವರ ಬಂಧನವಾಗಿತ್ತು.
ನಂತರ ಹೈಕೋರ್ಟ್ ಸೂಚನೆ ಮೇರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ವು ಕಳೆದ ಜನವರಿಯಲ್ಲಿ 545 ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ ನಡೆಸಿತ್ತು. ಮಾ. 28ರಂದು ಅಭ್ಯರ್ಥಿಗಳ ಅಂಕಗಳನ್ನು ಪ್ರಕಟಿಸಿತ್ತು. ಇದೀಗ ಗೃಹ ಇಲಾಖೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ