ಬೆಂಗಳೂರು: ಭಾರೀ ಕೂತೂಹಲಕ್ಕೆ ಕಾರಣವಾಗಿರುವ ಚನ್ನಪಟ್ಟಣದ ಉಪಚುನಾವಣೆಗೆ ಸಂಬಂಧಿಸಿದಂತೆ ಟಿಕೆಟ್ ಆಕಾಂಕ್ಷಿಯಾಗಿರುವ ಸಿ.ಪಿ.ಯೋಗೇಶ್ವರ ವಿಚಾರದಲ್ಲಿ ಇದ್ದ ಕೂತೂಹಲಕ್ಕೆ ಬುಧವಾರ (ಅ23) ರಂದು ತೆರೆ ಬಿದ್ದಿದೆ. ರಾಜಕೀಯ ಬೆಳವಣಿಗೆಯಲ್ಲಿ ಸಿ.ಪಿ.ಯೋಗೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಅವರು ವಾಟ್ಸ್ಆಯಪ್ ಮೂಲಕ ಬಿಜೆಪಿಗೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಸದಾಶಿವ ನಗರದ ಉಪಮುಖ್ಯಮಂತ್ರಿ ಡಿ.ಕೆ.. ಶಿವಕುಮಾರ ಅವರ ನಿವಾಸದಲ್ಲಿ ಬುಧವಾರ ಕಾಂಗ್ರೆಸ್ ಪ್ರಮುಖರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಮಾಜಿ ಸಂಸದ ಡಿ.ಕೆ. ಸುರೇಶ, ಸಚಿವ ಜಮೀರ್ ಅಹ್ಮದ್, ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮೊದಲಾದವರು ಇದ್ದರು. ಈ ಬೆಳವಣಿಗೆಯಿಂದ ಯೋಗೇಶ್ವರ ಅವರು ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಖಚಿತವಾದಂತಾಗಿದೆ.
ಈಗಾಗಲೇ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಯೋಗೇಶ್ವರ ಅವರು ಬಿಜೆಪಿ ಪ್ರಾಥಮಿಕ ಸದಸ್ಯತವಕ್ಕೂ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಎಂಬುದು ಈಗ ಕೇವಲ ಔಪಚಾರಿಕವಾಗಿ ಉಳಿದಿದೆಯಷ್ಟೆ.
ನಿಮ್ಮ ಕಾಮೆಂಟ್ ಬರೆಯಿರಿ