ವಯನಾಡು : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಅವರು ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.
ಪ್ರಿಯಾಂಕಾ ಗಾಂಧಿ ವಾದ್ರಾ ಉಮೇದುವಾರಿಕೆ ಕುರಿತು ಮಾತನಾಡಿದ ರಾಹುಲ್ ಗಾಂಧಿ, ವಯನಾಡಿನ ಜನರು ನನ್ನ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದಾರೆ. ನನ್ನ ಸಹೋದರಿ ಪ್ರಿಯಾಂಕಾ ಗಾಂಧಿಗಿಂತ ಉತ್ತಮ ಪ್ರತಿನಿಧಿಯನ್ನು ನಾನು ಊಹಿಸಲು ಸಾಧ್ಯವಿಲ್ಲ. ವಯನಾಡಿನ ಅಗತ್ಯತೆಗಳು ಮತ್ತು ಸಂಸತ್ತಿನಲ್ಲಿ ಪ್ರಬಲ ಧ್ವನಿಯಾಗಲಿದ್ದು, ಅವರು ಸುಲಭವಾಗಿ ಗೆಲ್ಲಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಬುಧವಾರ ಬೆಳಿಗ್ಗೆ ವಯನಾಡಿನ ಕಲ್ಲಾಪೆಟ್ಟಾ ನ್ಯೂ ಬಸ್ ಸ್ಟಾಂಡ್‌ನಿಂದ ಪ್ರಿಯಾಂಕಾ ಗಾಂಧಿ ಬೃಹತ್ ಮೆರವಣಿಗೆ ಮೂಲಕ ತೆರಳಿದರು. ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪತಿ ರಾಬರ್ಟ್ ವಾದ್ರಾ ಸೇರಿದಂತೆ ಹಲವು ಗಣ್ಯರು ಪ್ರಿಯಾಂಕಾ ಗಾಂಧಿಯವರಿಗೆ ಸಾಥ್ ನೀಡಿದರು. ಅದ್ಧೂರಿ ಮೆರವಣಿಗೆ ಬಳಿಕ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರು ಭಾಗಿಯಾದರು. ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲಾದವರು ಉಪಸ್ಥಿತರಿದ್ದರು.
ರಾಹುಲ್ ಗಾಂಧಿ ರಾಜೀನಾಮೆ ಬಳಿಕ ಪ್ರಿಯಾಂಕಾ ಗಾಂಧಿ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಘೋಷಿಸಿತ್ತು. ಉಪ ಚುನಾವಣೆ ದಿನಾಂಕ ಘೋಷಿಸಿದ ನಂತರ ಪ್ರಿಯಾಂಕಾ ಗಾಂಧಿಯವರ ಹೆಸರನ್ನು ಪ್ರಕಟಿಸಲಾಗಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ