ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ 6 ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ದರ್ಶನ್ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈಕೋರ್ಟ್ 45 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ ಜಾಮೀನಿಗೆ ಸಾಕಷ್ಟು ಷರತ್ತುಗಳನ್ನೂ ವಿಧಿಸಿದೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಆರು ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.
ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ಜಾಮೀನು ಪಡೆದ ಬಳಿಕ ಒಂದು ವಾರದಲ್ಲಿ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ಸಲ್ಲಿಸಬೇಕು. ಅಲ್ಲದೆ ದರ್ಶನ್ ಪಾಸ್ಪೋರ್ಟ್ ಅನ್ನು ಕೋರ್ಟ್ ಸುಪರ್ದಿಗೆ ನೀಡಬೇಕು ಎಂದು ಕೋರ್ಟ್ ಹೇಳಿದೆ.
ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್ನಲ್ಲಿ ಅರ್ಜಿ ಹಾಕಿದ್ದರು. ಹೈಕೋರ್ಟ್ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ದರ್ಶನ್ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡ ಹೈಕೋರ್ಟ್ ಷರತ್ತುಬದ್ಧ ಮದ್ಯಂತರ ಜಾಮೀನು ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ