ವಕ್ಫ್ ವಿವಾದ | ರೈತರಿಗೆ ನೀಡಿದ್ದ ನೋಟಿಸ್ ತಕ್ಷಣ ವಾಪಸ್ ಪಡೆಯಿರಿ ; ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ವಕ್ಫ್‌ ವಿಚಾರದಲ್ಲಿ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಶನಿವಾರ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇನ್ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.
ಅಧಿಕಾರಿಗಳು ಈ ಬಗ್ಗೆ ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು, ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು. ರೈತರ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಕಾನೂನು ಹಾಗೂ ಸಂಸದೀಯ ಖಾತೆ ಸಚಿವ ಎಚ್.ಕೆ. ಪಾಟೀಲ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌‌ ಮೊದಲಾದವರು ಸಭೆಯಲ್ಲಿ ಹಾಜರಿದ್ದರು.

ಪ್ರಮುಖ ಸುದ್ದಿ :-   ಬೆಂಗಳೂರು | ಟೆಕ್ಕಿ ನಂತರ ಹೆಂಡತಿ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಕಾನ್‌ಸ್ಟೆಬಲ್...! ಡೆತ್​ನೋಟ್​ನಲ್ಲಿ ಕಿರುಕುಳದ ಆರೋಪ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement