ಮುಡಾ ಹಗರಣ ಸಿಬಿಐ ತನಿಖೆಗೆ ಕೋರಿ ಅರ್ಜಿ | ಸಿಎಂಗೆ ಹೈಕೋರ್ಟ್‌ ನೋಟಿಸ್‌ : ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ

ಬೆಂಗಳೂರು : ಮುಡಾ ಹಗರಣ (MUDA scam)ಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ. ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್‌ 25ರ ವರೆಗೆ ಏನೆಲ್ಲ ತನಿಖೆ ನಡೆಸಲಾಗಿದೆ ಎಂಬುದರ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ.
ಮುಡಾ ಹಗರಣದ ಸ್ವತಂತ್ರ, ನ್ಯಾಯಸಮ್ಮತ, ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ನಿರ್ದೇಶನ ನೀಡುವಂತೆ ಕೋರಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಆದೇಶ ಮಾಡಿತು.

ಅರ್ಜಿದಾರ ಸ್ನೇಹಮಯಿ ಕೃಷ್ಣ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಕೆ.ಜಿ. ರಾಘವನ್‌ ಅವರು “ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬುದು ನಮ್ಮ ಕೋರಿಕೆ. ಇಂಥ ಪ್ರಕರಣದಲ್ಲಿ ತನಿಖಾ ಪ್ರಕ್ರಿಯೆಯು ಸಾರ್ವಜನಿಕ ನಂಬಿಕೆ ಉಳಿಯುಂತೆ ನಡೆಯಬೇಕಿದೆ. ಹೀಗಾಗಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು” ಎಂದು ಕೋರಿದರು.
ಇದನ್ನು ಮಾನ್ಯ ಮಾಡಿದ ಪೀಠವು ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ, ಅವರ ಭಾವ ಮಲ್ಲಿಕಾರ್ಜುನ ಸ್ವಾಮಿ, ಕೇಂದ್ರ ಸರ್ಕಾರ, ಕೇಂದ್ರ ತನಿಖಾ ದಳ (ಸಿಬಿಐ), ರಾಜ್ಯ ಸರ್ಕಾರ, ರಾಜ್ಯ ಪೊಲೀಸ್ ಮುಖ್ಯಸ್ಥರು, ಲೋಕಾಯುಕ್ತ ಪೊಲೀಸರು ಮತ್ತು ಇತರರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಅಲ್ಲದೇ, ನವೆಂಬರ್‌ 25ರವರೆಗೆ ಲೋಕಾಯುಕ್ತ ಪೊಲೀಸರು ಪ್ರಕರಣದಲ್ಲಿ ಇದುವರೆಗೆ ತನಿಖೆ ನಡೆಸಿರುವುದರ ಸಂಬಂಧ ವಸ್ತುಸ್ಥಿತಿ ವರದಿ ಸಲ್ಲಿಸಬೇಕು ಎಂದು ಆದೇಶಿಸಿ, ವಿಚಾರಣೆಯನ್ನು ನವೆಂಬರ್‌ 26ಕ್ಕೆ ಮುಂದೂಡಿತು.

ಪ್ರಮುಖ ಸುದ್ದಿ :-   ವಾಯುಭಾರ ಕುಸಿತ : ಕರ್ನಾಟಕದಲ್ಲಿ ಮೇ 24ರ ವರೆಗೆ ಭಾರಿ ಮಳೆ ಮುನ್ನೆಚ್ಚರಿಕೆ ; 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement