ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ನಗರದ ದಂಡು ರಸ್ತೆಯ ಬಳಿ ಶುಕ್ರವಾರ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಯಾಗಿದೆ. ಬಂಗಾರಪೇಟೆ ಪೊಲೀಸರ ಪ್ರಕಾರ, “ರಾಜಕುಮಾರ ಎಂಬವರಿಗೆ ಸೇರಿದ ಮೂರು ಅಂತಸ್ತಿನ ಕಟ್ಟಡದ ನೆಲ ಮಹಡಿಯ ನವೀಕರಣದ ಸಮಯದಲ್ಲಿ ಕಟ್ಟಡ ಕುಸಿದಿದೆ. ಮನೆಯಲ್ಲಿದ್ದ ಮೂರು ಕುಟುಂಬಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಾಂತರಿಸಿದ್ದರು.
ಕಳೆದ ಎರಡು ತಿಂಗಳ ಹಿಂದೆಯೇ ಈ ಮನೆಯನ್ನು ಖಾಲಿ ಮಾಡಲಾಗಿತ್ತು. ಹೀಗಾಗಿ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನೆಲ ಅಂತಸ್ತಿನ ಕಟ್ಟಡ ನವೀಕರಣ ಮಾಡುವಾಗ ಇದು ವಾಲಿತ್ತು ಎನ್ನಲಾಗಿದೆ. ಹೀಗಾಗಿ ಅಲ್ಲಿದ್ದ ಕುಟುಂಬಗಳನ್ನು ಸ್ಥಳಾಂತರಿಸಲಾಗಿತ್ತು ಎನ್ನಲಾಗಿದೆ. ಕಟ್ಟಡ ಕುಸಿತದಿಂದ ಖಾಸಗಿ ಶಾಲೆಯ ಕಾಂಪೌಂಡ್‌ಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ