ಸಚಿವ ಜಮೀರ್ ಅಹ್ಮದ್‌ ಗೆ ಕಾನೂನು ಸಂಕಷ್ಟ ; ಅಗತ್ಯ ಕ್ರಮಕ್ಕೆ ರಾಜ್ಯಪಾಲರ ಸೂಚನೆ

ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ಅಡ್ವೊಕೇಟ್ ಜನರಲ್​ಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾದ ಟಿ.ಜೆ. ಅಬ್ರಹಾಂ ಅವರು, ವಸತಿ ಸಚಿವ ಜಮೀರ್‌ ಅಹಮದ್ ಖಾನ್‌ ಮುಡಾ ಪ್ರಕರಣ ಸಂಬಂಧ ಹೈಕೋರ್ಟ್ ತೀರ್ಪಿನ ವಿರುದ್ಧ ಹೇಳಿಕೆ ನೀಡಿದ್ದಾರೆ, ಅವರ ಮೇಲೆ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಲು ಅನುಮತಿ ನೀಡಬೇಕು ಎಂದು ಕೋರಿ ಅಕ್ಟೋಬರ್‌ 21ಕ್ಕೆ ಮನವಿ ಸಲ್ಲಿಸಿದ್ದರು. ಹಾಗೂ ತಮ್ಮ ದೂರಿನ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಅಡ್ವೊಕೇಟ್‌ ಜನರಲ್‌ ಅವರಿಗೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು.
ಇದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಅಡ್ವೊಕೇಟ್‌ ಜನರಲ್‌ ಅವರಿಗೆ ಪತ್ರ ಬರೆದು ನಿಯಮದಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪತ್ರದಲ್ಲಿ ಸಚಿವ ಜಮೀರ್ ಖಾನ್ ಹೈಕೋರ್ಟ್ ತೀರ್ಪಿನ ವಿರುದ್ಧ ಗಂಭೀರ ಆರೋಪ ಮಾಡಿ ನ್ಯಾಯಾಂಗ ವ್ಯವಸ್ಥೆಯನ್ನೇ ಪ್ರಶ್ನಿಸಿದ್ದಾರೆ ಎಂದು ದೂರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ದೂರು ಸಲ್ಲಿಸಿದ್ದಾರೆ. ಈ ಸಂಬಂಧ ನಿಯಮದ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸುವಂತೆ ರಾಜ್ಯಪಾಲರಿಂದ ನಿರ್ದೇಶಿತನಾಗಿದ್ದೇನೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ತಿಳಿಸಿದ್ದಾರೆ .
ಮುಡಾ ಪರ್ಯಾಯ ನಿವೇಶನ ಹಂಚಿಕೆ ಆರೋಪಿತ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಿದ ಹೈಕೋರ್ಟ್ ತೀರ್ಪಿಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್​​ ಖಾನ್ ಇದು ರಾಜಕೀಯ ಪ್ರೇರಿತ ತೀರ್ಪು ಎಂದು ಹೇಳಿದ್ದರು. ಹಾಗೂ ಇದು ತನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದರು. ಹೀಗಾಗಿ ಅವರ ವಿರುದ್ಧ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿತ್ತು. ನ್ಯಾಯಾಲಯದ ಘನತೆಗೆ ಕುಂದು ಉಂಟು ಮಾಡುವ ರೀತಿಯಲ್ಲಿ ಹೈಕೋರ್ಟ್‌ ತೀರ್ಪಿನ ಬಗ್ಗೆ ಹೇಳಿಕೆ ನೀಡಿರುವ ಸಚಿವ ಜಮೀರ್‌ ಅಹಮದ್ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಲು ಅನುಮತಿ ನೀಡಬೇಕು ಎಂದು ಕೋರಿ ಟಿ.ಜೆ.ಅಬ್ರಹಾಂ ಅವರು ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು

ಪ್ರಮುಖ ಸುದ್ದಿ :-   ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement