
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed) ವಿರುದ್ಧ ಎಫ್ ಐಆರ್ (FIR) ದಾಖಲಾಗಿದೆ ಎಂದು ವರದಿಯಾಗಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ನೀಡಿದ್ದ ಹೇಳಿಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. “ಸಚಿವ ಜಮೀರ್ ಅಹ್ಮದ್ ಅವರು ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಟೀಕಿಸಿದ್ದಾರೆ. ಕಾಲಾ (ಕರಿಯ) ಕುಮಾರಸ್ವಾಮಿ ಎಂದು ವರ್ಣಭೇದ ಪ್ರದರ್ಶಿಸಿ ಅವಮಾನ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ವಕೀಲ ಮಹೇಶ ಎಂಬವರು ದೂರು ನೀಡಿದ್ದು, ಹೊಸಕೋಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಜಮೀರ್ ಕ್ಷಮೆಯಾಚನೆ
ಚನ್ನಪಟ್ಟಣ ಚುನಾವಣೆಯ ಪ್ರಚಾರದ ವೇಳೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ನಂತರ ಸಚಿವ ಜಮೀರ್ ಅಹ್ಮದ್ ಕ್ಷಮೆಯಾಚಿಸಿದ್ದಾರೆ. ನನ್ನ ಮಾತಿನಿಂದ ಜೆಡಿಎಸ್ ಕಾರ್ಯಕರ್ತರಿಗೆ ಕ್ಷಮೆ ಕೋರುತ್ತೇನೆ ಎಂದು ಹೇಳಿದರು.
ಚನ್ನಪಟ್ಟಣದಲ್ಲಿ ವಿಧಾನಸಭೆ (ಚನ್ನಪಟ್ಟಣ ಉಪಚುನಾವಣೆ) ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ಜಮೀರ್ ಅಹ್ಮದ್ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರು. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ಪರ ಜಮೀರ್ ಅಹ್ಮದ್ ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಭಾಷಣದಲ್ಲಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ “ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್” ಎಂದು ಉರ್ದುವಿನಲ್ಲಿ ಹೇಳಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ