ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ ಗೆ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು : ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿ ನಮೂದಾಗಿದೆ ಎಂದು ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಿತ ಪ್ರಕರಣದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ.
ಹಾವೇರಿ ಸೆನ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ ಬಿಜೆಪಿಯ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿದೆ.
“ಅರ್ಜಿದಾರ ತೇಜಸ್ವಿ ಸೂರ್ಯ ಸಂಸದರಾಗಿದ್ದು, ಪೊಲೀಸ್‌ ಇನ್‌ಸ್ಪೆಕ್ಟರ್‌ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಅರ್ಜಿದಾರರ ಪರ ಹಿರಿಯ ವಕೀಲ ಅರುಣ ಶ್ಯಾಮ್‌ ಅವರು ಪೊಲೀಸರು ಸ್ಪಷ್ಟನೆ ನೀಡಿದ ಬಳಿಕ ಟ್ವೀಟ್‌ ಡಿಲೀಟ್‌ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಇದು ಬಿಎನ್‌ಎಸ್‌ ಸೆಕ್ಷನ್‌ 353 (2) ಅಡಿ ಅಪರಾಧವಾಗುವುದಿಲ್ಲ. ಹೀಗಾಗಿ, ಅರ್ಜಿದಾರರ ವಿರುದ್ಧದ ವಿಚಾರಣೆಗೆ ತಡೆ ನೀಡಲಾಗಿದೆ. ವಿಶೇಷ ಸರ್ಕಾರಿ ಅಭಿಯೋಜಕ-1 ಬಿ ಎ ಬೆಳ್ಳಿಯಪ್ಪ ಅವರು ಮಧ್ಯಂತರ ಆದೇಶಕ್ಕೆ ವಿರೋಧಿಸಿದ್ದು, ಅದರಲ್ಲಿ ಬದಲಾವಣೆ ಮಾಡುವಂತೆ ಕೋರಲು ಸ್ವಾತಂತ್ರ್ಯ ಕಲ್ಪಿಸಲಾಗಿದೆ. ವಿಚಾರಣೆಯನ್ನು ಡಿಸೆಂಬರ್‌ 4ಕ್ಕೆ ಮುಂದೂಡಲಾಗಿದೆ” ಎಂದು ಮಧ್ಯಂತರ ಆದೇಶ ಮಾಡಿದೆ.
ಪ್ರಕರಣದ ಹಿನ್ನೆಲೆ: ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿದ್ದರಿಂದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎರಡು ಡಿಜಿಟಲ್‌ ಮಾಧ್ಯಮಗಳ ಇ-ಪೇಪರ್‌ನಲ್ಲಿ ಸುಳ್ಳು ಸುದ್ದಿ ಪ್ರಕಟಿಸಲಾಗಿದೆ. ಇದನ್ನು ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ತೇಜಸ್ವಿ ಸೂರ್ಯರನ್ನು ಮೊದಲ ಆರೋಪಿಯನ್ನಾಗಿಸಿ ಹಾವೇರಿಯ ಸೆನ್‌ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್‌ 353 (2) ಅಡಿ (ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವ ಮತ್ತು ದ್ವೇಷಕ್ಕೆ ಪ್ರಚೋದನೆ ನೀಡುವ ಸುಳ್ಳು ಸುದ್ದಿ ಹರಡಿದ ಆರೋಪ) ಎಫ್‌ಐಆರ್‌ ದಾಖಲಿಸಲಾಗಿದೆ.

ಪ್ರಮುಖ ಸುದ್ದಿ :-   ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು ; ನಾಲ್ವರ ರಕ್ಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement