ಉಡುಪಿ: ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ (Naxalite Encounter) ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ ಎಂದು ವರದಿಯಾಗಿದೆ.
ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಸೀತಂಬೈಲು ಎಂಬಲ್ಲಿ ನಕ್ಸಲರ ವಿರುದ್ಡ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದು, ಉಳಿದ ನಾಲ್ಕೈದು ಜನ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕೊಪ್ಪ ತಾಲೂಕಿನ ಯಡಗುಂದ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದ ಬಗ್ಗೆ ನಕ್ಸಲ್ ನಿಗ್ರಹ ದಳ (ಎಎನ್ ಎಫ್)ಕ್ಕೆ ಮಾಹಿತ ಲಭಿಸಿತ್ತು. ನಂತರ ಸೋಮವಾರ ರಾತ್ರಿ ವೇಳೆ ಸುಮಾರು 5 ಜನರಿದ್ದ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಿಸಲು ಬಂದಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಇದರ ಆಧಾರದ ಮೇಲೆ ನಕ್ಸಲ್ ನಿಗ್ರಹ ದಳ ಕಾರ್ಯಾಚರಣೆ ನಡೆಸಿದೆ. ಆಗ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ನಂತರ ಎನ್ಕೌಂಟರ್ನಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದಾನೆ. ಇನ್ನುಳಿದ ನಾಲ್ಕು ನಕ್ಸಲರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
ಈ ಭಾಗ ದಟ್ಟ ಅರಣ್ಯದಿಂದ ಕೂಡಿದೆ. ಕೇವಲ ಮೂರು ಮನೆಗಳ ಮಾತ್ರ ಇವೆ. ನಕ್ಸಲರು ಪಡಿತರಕ್ಕೆ ಬರುತ್ತಾರೆ ಎಂಬ ಗುಮಾನಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದ್ದು ಯಶಸ್ಸು ಸಿಕ್ಕಿದೆ. ಹತನಾಗಿದರುವ ವಿಕ್ರಮ್ ಗೌಡ ನಕ್ಸಲರ ನೇತ್ರಾವತಿ ದಳದ ನಾಯಕನಾಗಿದ್ದ.ಈಗ ನಕ್ಸಲ್ ನಾಯಕನನ್ನೇ ಬೇಟೆಯಾಡಲಾಗಿದೆ. ಕರ್ನಾಟಕ ಹಾಗೂ ಕೇರಳದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡನ ಮೂಲ ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕೂಡ್ಲು ನಾಡ್ಪಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಂ ಗೌಡ ಹೆಗಲಿಗೆ ಬಿದ್ದಿತ್ತು. 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಂ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಂ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದ. 2016ರಲ್ಲಿ ಕೇರಳ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿದ್ದ.
ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾದ ಮಾಹಿತಿ ಸಿಕ್ಕ ನಂತರ ಕೆಲವು ದಿನಗಳಿಂದ ನಕ್ಸಲ್ ನಿಗ್ರಹ ಪಡೆ ತನ್ನ ಕಾರ್ಯಾಚರಣೆ ತೀವ್ರಗೊಳಿಸಿತ್ತು. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಹೀಗಾಗಿ ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.
ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅಲ್ಲದೆ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಬಂದ ಬಗ್ಗೆ ಸುಳಿವು ದೊರೆತಿತ್ತು. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು. ಅವರು ಬಂದೂಕು ತೋರಿಸಿ ಹೆದರಿಸಿ ಊಟ ಮಾಡಿ ಹೋಗಿದ್ದರು ಎನ್ನಲಾಗಿದೆ. ಸುಬ್ಬೆಗೌಡ 3 ಬಂದೂಕುಗಳು ಪತ್ತೆಯಾಗಿದ್ದವು. ಅದರ ನಂತರ ನಕ್ಸಲ ನಿಗ್ರಹ ಕಾರ್ಚಾರಣೆ ಚುರುಕುಗೊಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ