87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು. ಚನ್ನಬಸಪ್ಪ ಆಯ್ಕೆ

ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ. ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.
ಡಿಸೆಂಬರ್‌ 20ರಿಂದ 22ರ ವರೆಗೆ ಮೂರು ದಿನ ಕಾಲ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ. ಮಹೇಶ ಜೋಶಿ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ ರು ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಗೊ. ರು. ಚೆನ್ನಬಸಪ್ಪನವರು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಗೊಂಡೇದಹಳ್ಳಿಯಲ್ಲಿ 1930ರ ಮೇ 18ರಂದು ಜನಿಸಿದರು. ವಿದ್ಯಾರ್ಥಿಯಾಗಿದ್ದಾಗ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದ್ದರು. ತಮ್ಮ 18ನೇ ವಯಸ್ಸಿನಲ್ಲೇ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿಗೆ ಸೇರಿದರು. ಜಾನಪದ ವಿದ್ವಾಂಸರಾದ ಚನ್ನಬಸಪ್ಪ ಅವರು ಕರ್ನಾಟಕ ಪ್ರಗತಿಪಥ, ಸಾಕ್ಷಿಕಲ್ಲು, ಬಾಗೂರು ನಾಗಮ್ಮ, ಗ್ರಾಮಗೀತೆಗಳು, ಕರ್ನಾಟಕ ಜನಪದ ಕಲೆಗಳು, ಹೊನ್ನ ಬಿತ್ತೇವು ನೆಲಕೆಲ್ಲ ಸೇರಿದಂತೆ 50ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಗೊ.ರು ಚನ್ನಬಸಪ್ಪ ಅವರು 1992 ರಿಂದ 1995 ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿದ್ದರು. ಅಷ್ಟೇ ಅಲ್ಲ, ದೇಶದಲ್ಲೇ ಮೊದಲ ಜಾನಪದ ವಿಶ್ವವಿದ್ಯಾನಿಲಯವನ್ನು ಕರ್ನಾಟಕದಲ್ಲಿ ಸ್ಥಾಪಿಸುವಲ್ಲಿ ಅವರು ಬಹುಮುಖ್ಯ ಪಾತ್ರವಹಿಸಿದ್ದರು.

ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement