ಮುಡಾ ಹಗರಣ | ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಜನವರಿ 25ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್‌ 17ಎ ಅಡಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿಸಲು ರಾಜ್ಯಪಾಲರಿಗೆ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ರಾಜ್ಯ ಸರ್ಕಾರ ವಾದಿಸಿತು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಅನುಮತಿಸಿರುವುದನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ, ಭೂ ಮಾಲೀಕ ಜೆ ದೇವರಾಜು ಸಲ್ಲಿಸಿರುವ ಮೇಲ್ಮನವಿ ಹಾಗೂ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ ಅವರಿದ್ದ ವಿಭಾಗೀಯ ಪೀಠವು ಗುರುವಾರ ನಡೆಸಿತು. ಇದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸೇರಿ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆಯನ್ನು 2025ರ ಜನವರಿ 25ಕ್ಕೆ ಮುಂದೂಡಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಮುಡಾ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಅಧಿಕಾರ ವ್ಯಾಪ್ತಿಯನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ. ರಾಜ್ಯ ಸರ್ಕಾರ ಪ್ರತಿನಿಧಿಸಿರುವ ಹಿರಿಯ ವಕೀಲ ಕಪಿಲ್‌ ಸಿಬಲ್‌, “ಈ ಪ್ರಕರಣದಲ್ಲಿ ತನಿಖೆಗೆ ಅನುಮತಿಸುವ ಸಕ್ಷಮ ಪ್ರಾಧಿಕಾರದ ವಿಚಾರವು ಮಹತ್ವದ ಸಾಂವಿಧಾನಿಕ ವಿಚಾರವಾಗಿದೆ. ಇದು ಯಾವುದೇ ಪಕ್ಷದ ಮುಖ್ಯಮಂತ್ರಿ, ಮಂತ್ರಿಗೆ ಸಂಬಂಧಿಸಿದ್ದಲ್ಲ. ಈ ರೀತಿ ಮುಖ್ಯಮಂತ್ರಿ, ಸಚಿವರ ವಿರುದ್ಧ ತನಿಖೆಗೆ ಅನುಮತಿಸುತ್ತಾ ಹೋದರೆ ಅರಾಜಕತೆ ಸೃಷ್ಟಿಯಾಗಲಿದೆ. ಇಲ್ಲಿ ಮುಖ್ಯವಾದ ಸಾಂವಿಧಾನಿಕ ವಿಚಾರಗಳು ಅಡಕವಾಗಿವೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್‌ 17ಎ ಅಡಿ ಮುಖ್ಯಮಂತ್ರಿಯ ವಿರುದ್ಧ ತನಿಖೆಗೆ ಅನುಮತಿಸಲು ರಾಜ್ಯಪಾಲರಿಗೆ ವ್ಯಾಪ್ತಿಯೇ ಇಲ್ಲ” ಎಂದು ವಾದಿಸಿದರು.

ಪ್ರಮುಖ ಸುದ್ದಿ :-   ಟಿಎಂಸಿ ಇಬ್ಭಾಗ ; ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಉಚ್ಚಾಟಿತ ಶಾಸಕ ರಿತಬ್ರತ ಬೆಂಬಲಿಸಿ ಸ್ಪೀಕರ್‌ಗೆ 58 ಶಾಸಕರ ಹಕ್ಕು ಸಲ್ಲಿಕೆ !

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸಿರುವ ಅಭಿಷೇಕ ಮನುಸಿಂಘ್ವಿ ಮತ್ತು ಪ್ರೊ. ರವಿವರ್ಮಕುಮಾರ, ರಾಜ್ಯ ಸರ್ಕಾರ ಪ್ರತಿನಿಧಿಸಿರುವ ಕಪಿಲ್‌ ಸಿಬಲ್‌ ಮತ್ತು ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ ಶೆಟ್ಟಿ ಹಾಗೂ ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿನಿಧಿಸಿರುವ ಕೆ.ಜಿ. ರಾಘವನ್‌ ಮತ್ತು ಮಣೀಂದರ ಸಿಂಗ್‌ ಅವರ ವಾದ-ಪ್ರತಿವಾದವನ್ನು ನ್ಯಾಯಾಲಯ ಆಲಿಸಿತು. ಜೆ ದೇವರಾಜು ಪ್ರತಿನಿಧಿಸಿರುವ ದುಷ್ಯಂತ್‌ ದವೆ ಅವರ ವಾದ ಆಲಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆ ದೇವರಾಜು ಅವರು ಸಲ್ಲಿಸಿರುವ ಪ್ರತ್ಯೇಕ ಮೇಲ್ಮನವಿಗಳಿಗೆ ಸಂಬಂಧಿಸಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಮತ್ತು ದೂರುದಾರರಾದ ಟಿ ಜೆ ಅಬ್ರಹಾಂ, ಸ್ನೇಹಮಯಿ ಕೃಷ್ಣ ಮತ್ತು ಎಸ್‌ ಪಿ ಪ್ರದೀಪಕುಮಾರ ಅವರಿಗೆ ನೋಟಿಸ್‌ ಜಾರಿ ಮಾಡಿತು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement