ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಮುಖಂಡ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ದೆಹಲಿ ಪೊಲೀಸರು ಗುರುವಾರ (ಡಿ. 19) ಎಫ್ಐಆರ್ ದಾಖಲಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಘರ್ಷಣೆಯಲ್ಲಿ ಇಬ್ಬರು ಬಿಜೆಪಿ ನಾಯಕರು ಗಾಯಗೊಂಡ ಹಿನ್ನೆಲೆಯಲ್ಲಿ ಅವರ ವಿರುದ್ಧ ಬಿಜೆಪಿ ದೂರು ದಾಖಲಿಸಿತ್ತು.
ಸೆಕ್ಷನ್ 117 (ಸ್ವಯಂ ಪ್ರೇರಿತವಾಗಿ ತೀವ್ರ ಗಾಯ ಉಂಟು ಮಾಡುವುದು), 125 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಕೃತ್ಯ), 131 (ಕ್ರಿಮಿನಲ್ ಬಲದ ಬಳಕೆ), 351 (ಕ್ರಿಮಿನಲ್ ಬೆದರಿಕೆ) ಮತ್ತು 3 (5) (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಾತನಾಡುವಾಗ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ವಿಪಕ್ಷಗಳು ಗುರುವಾರ ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ್ದವು. ಈ ವೇಳೆ ನಡೆದ ಘರ್ಷಣೆಯಲ್ಲಿ ಬಿಜೆಪಿಯ ಇಬ್ಬರು ಸಂಸದರಾದ ಪ್ರತಾಪ ಚಂದ್ರ ಸಾರಂಗಿ ಮತ್ತು ಮುಖೇಶ ರಜಪೂತ್ ಅವರು ಗಾಯಗೊಂಡಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಂತರ ಕೇಂದ್ರ ಸಚಿವ ಅನುರಾಗ ಠಾಕೂರ್ ನೇತೃತ್ವದ ಬಿಜೆಪಿ ನಿಯೋಗ ರಾಹುಲ್ ಗಾಂಧಿ ವಿರುದ್ಧ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.. ಈ ವೇಳೆ ಬಿಜೆಪಿ ಸಂಸದರಾದ ಹೇಮಾಂಗ ಜೋಶಿ, ಬಾನ್ಸುರಿ ಸ್ವರಾಜ ಮೊದಲಾದವರಿದ್ದರು.
ಘರ್ಷಣೆಯಲ್ಲಿ ಬಿಜೆಪಿ ಸಂಸದರಾದ ಪ್ರತಾಪ ಚಂದ್ರ ಸಾರಂಗಿ ಮತ್ತು ಮುಖೇಶ ರಜಪೂತ್ ಅವರ ತಲೆಗೆ ಗಾಯಗಳಾಗಿದ್ದು, ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕ ಅಜಯ ಶುಕ್ಲಾ ತಿಳಿಸಿದ್ದಾರೆ.
ಮತ್ತೊಂದೆಡೆ ಕಾಂಗ್ರೆಸ್ ನಾಯಕರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಸಂಸದರ ವಿರುದ್ದ ದೂರು ನೀಡಿದ್ದಾರೆ. ಬಿಜೆಪಿ ನಾಯಕರು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ದೂರು ದಾಖಲಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ