
ಬೆಂಗಳೂರು : ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರ ವಿರುದ್ಧ ವಿಧಾನ ಪರಿಷತ್‌ನಲ್ಲಿ ಅಶ್ಲೀಲ ಪದ ಬಳಕೆಯ ಆರೋಪದ ಮೇಲೆ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ಆದೇಶ ಮಾಡಿದೆ.
ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ತನ್ನನ್ನು ಅಕ್ರಮವಾಗಿ ಬಂಧಿಸಿ, ಕಾನೂನುಬಾಹಿರವಾಗಿ ನಡೆದುಕೊಂಡಿರುವುದರಿಂದ ತಕ್ಷಣ ಬಿಡುಗಡೆಗೆ ಆದೇಶಿಸಬೇಕು ಎಂದು ಕೋರಿ ಸಿ ಟಿ ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ಜಿ ಉಮಾ ಅವರ ಏಕಸದಸ್ಯ ಪೀಠ ೀ ಆದೇಶ ಮಾಡಿದೆ. ಹಾಗೂ ತನಿಖಾಧಿಕಾರಿ ಸೂಚಿಸಿದಾಗ ತನಿಖೆಗೆ ಹಾಜರಾಗಬೇಕು ಎಂಬ ಷರತ್ತನ್ನು ವಿಧಿಸಿದೆ.

ಆರೋಪಿತ ಘಟನೆಯು ಅತ್ಯಂತ ದುರದೃಷ್ಟಕರವಾಗಿದ್ದು, ಸಿಆರ್‌ಪಿಸಿ ಸೆಕ್ಷನ್ 41ಎ (ಪೊಲೀಸ್ ನೋಟಿಸ್ ನೀಡುವುದು) ಅಡಿ ಪೊಲೀಸರು ಪ್ರಕ್ರಿಯೆ ಪಾಲಿಸಬೇಕಿತ್ತು. ಸಿ.ಟಿ. ರವಿ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದು, ಅವರು ತನಿಖೆಗೆ ಲಭ್ಯವಾಗುವುದಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ. ಬೆಳಗಾವಿಯ ಸುವರ್ಣ ಸೌಧದ ವಿಧಾನ ಪರಿಷತ್‌ನಲ್ಲಿ ನಡೆದಿರುವ ಘಟನೆಯ ಬಗ್ಗೆ ಸಭಾಪತಿಗಳು ಏನನ್ನೂ ಉಲ್ಲೇಖಿಸಿಲ್ಲ. ರವಿ ಅವರು ತಕ್ಷಣ ಬಿಡುಗಡೆ ಸಂಬಂಧಿತ ಮಧ್ಯಂತರ ಕೋರಿಕೆಗೆ ಅರ್ಹರಾಗಿದ್ದಾರೆ. ಹೀಗಾಗಿ, ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು” ಎಂದು ನ್ಯಾಯಾಲಯವು ಆದೇಶಿಸಿದೆ.
ರವಿ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಂದೇಶ ಚೌಟ ಅವರು “ಸಿ.ಟಿ. ರವಿ ಅವರನ್ನು ಬೆಳಗಾವಿ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ಪೊಲೀಸ್ ನೋಟಿಸ್ ನೀಡಿಲ್ಲ, ಬಂಧನಕ್ಕೆ ಆಧಾರ ಒದಗಿಸಿಲ್ಲ. ಇದು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಾಗಿದೆ. ರವಿ ಅವರನ್ನು ಬಂಧಿಸಿದ ಬಳಿಕ ಪೊಲೀಸರು ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಅರ್ನಾಬ್ ಗೋಸ್ವಾಮಿ ಪ್ರಕರಣದ ಹಿನ್ನೆಲೆಯಲ್ಲಿ ತಕ್ಷಣ ಬಿಡುಗಡೆಗೆ ರವಿ ಅರ್ಹರಾಗಿದ್ದಾರೆ” ಎಂದು ವಾದಿಸಿದರು.
ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ವಿಶೇಷ ಸರ್ಕಾರಿ ಅಭಿಯೋಜಕ ಎಸ್ ಎ ಬೆಳ್ಳಿಯಪ್ಪ ಅವರು “ರವಿ ಅವರನ್ನು ಟ್ರಾನ್ಸಿಟ್ ರಿಮ್ಯಾಂಡ್ ಮೇಲೆ ಬೆಂಗಳೂರಿಗೆ ಕರೆತರಲಾಗುತ್ತಿದೆ. ಜಾಮೀನು ಕೋರಿ ಅವರು ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.ಬಂಧನ ಅಕ್ರಮ ಎನ್ನುವುದಾದರೆ ಅವರು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲಿ. ಪೊಲೀಸರ ಜೊತೆ ಅವರು ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ವಾದಿಸಿದರು.
ಈ ಮಧ್ಯೆ ಪೀಠವು “ರವಿ ಅವರನ್ನು ವಶಕ್ಕೆ ಪಡೆದಿರುವ ರೀತಿಯ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನಿಸಿತು. ಗಂಭೀರ ಅಪರಾಧ ಪ್ರಕರಣಗಳಲ್ಲೂ ಪೊಲೀಸರು ವರ್ಷಗಟ್ಟಲೆ ಬಂಧಿಸುವುದಿಲ್ಲ. ವ್ಯಕ್ತಿಯ ಸ್ವಾತಂತ್ರ್ಯ ಹರಣವಾದಾಗ ಅದನ್ನು ರಕ್ಷಿಸುವುದು ನ್ಯಾಯಾಲಯದ ಕರ್ತವ್ಯ. ಅವರನ್ನು ವಶಕ್ಕೆ ಪಡೆದಿರುವ ರೀತಿ, ಅವರು ಗಾಯಗೊಂಡಿರುವ ರೀತಿಗೆ ಏನು ಉತ್ತರಿಸುತ್ತೀರಿ ಎಂದು ಪೀಠವು ಪ್ರಶ್ನಿಸಿತು.
ಅಂತಿಮವಾಗಿ ರವಿ ಅವರನ್ನು ಬಿಡುಗಡೆಗೆ ಆದೇಶಿಸಿ, ವಿಚಾರಣೆಯನ್ನು ಮುಂದೂಡಿತು.


ನಿಮ್ಮ ಕಾಮೆಂಟ್ ಬರೆಯಿರಿ