ನವದೆಹಲಿ: ಆಧುನಿಕ ಭಾರತದ ಆರ್ಥಿಕ ಸುಧಾರಣೆಯ ಹರಿಕಾರ ಹಾಗೂ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ರಾತ್ರಿ 9:51ಕ್ಕೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ (ಡಿಸೆಂಬರ್ ೨೮) ನಡೆಯಲಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ ಅವರು ಮಾತನಾಡಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮ ಸಂಸ್ಕಾರ ಶನಿವಾರ ನಡೆಯಲಿದೆ. ಈ ಕುರಿತು ಅಧಿಕೃತ ಮಾಹಿತಿಯನ್ನು ಶುಕ್ರವಾರ ಅಧಿಕೃತವಾಗಿ ತಿಳಿಸಲಾಗುವುದು ಎಂದು ಹೇಳಿದರು.
ಕಾಂಗ್ರೆಸ್ ನಾಯಕ ಡಾ. ಮನಮೋಹನ್ ಸಿಂಗ್ ಅವರ ನಿಧನ ದೇಶಕ್ಕಾಗಿರುವ ದೊಡ್ಡ ನಷ್ಟ. “ಡಾ. ಮನಮೋಹನ್ ಸಿಂಗ್ ಅವರು ಕಾಂಗ್ರೆಸ್ ಮತ್ತು ದೇಶದ ನಿಜವಾದ ಮಾದರಿ ವ್ಯಕ್ತಿಯಾಗಿದ್ದರು. ಸ್ವಾತಂತ್ರ್ಯ ನಂತರದ ಹೀರೋ ಮನಮೋಹನ್ ಸಿಂಗ್. ಅವರ ಧ್ಯೇಯ ಮತ್ತು ದೇಶವನ್ನು ಆಳುವ ಸಾಮರ್ಥ್ಯ ಎಲ್ಲರಿಗೂ ಸಾಕ್ಷಿಯಾಗಿದೆ. ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ನಡೆಯಲಿರುವ ಕಾಂಗ್ರೆಸ್ ಸಂಸ್ಥಾಪನಾ ದಿನ ಸೇರಿದಂತೆ ಏಳು ದಿನಗಳ ಕಾಲ ಕಾಂಗ್ರೆಸ್ ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು.
ಮನಮೋಹನ ಸಿಂಗ್ ಅವರ ಪಾರ್ಥಿವ ಶರೀರವನ್ನು ಏಮ್ಸ್ ನಿಂದ ಗುರುವಾರ ತಡರಾತ್ರಿ ಮೋತಿಲಾಲ್ ನೆಹರು ಮಾರ್ಗದಲ್ಲಿರುವ ಅವರ ನಿವಾಸಕ್ಕೆ ತಲುಪಿದ್ದು, ಇಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಡಾ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ