ವಿಜಯನಗರ/ ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿ, ‘ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ‘ಪ್ರಾಣಿ ಹಿಂಸೆ ಮಾಡುವುದು ಅಪರಾಧ. ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ತಪ್ಪಿತಸ್ಥರನ್ನು ಕೂಡಲೇ ಪತ್ತೆ ಹಚ್ಚಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಯಾರೇ ಕೃತ್ಯ ಎಸಗಿದ್ದರು ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಅವರು ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ಕರಾಳ ಸಂಕ್ರಾಂತಿ ಎಚ್ಚರಿಕೆ
‘ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸದಿದ್ದರೆ, ರಾಜ್ಯದಾದ್ಯಂತ ಕರಾಳ ಸಂಕ್ರಾಂತಿ ಆಚರಿಸಲಾಗುವುದು’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಗೋವನ್ನು ಪವಿತ್ರ ಎಂದು ಪರಿಗಣಿಸಿದೆ. ಸಂಕ್ರಾಂತಿ ಹಬ್ಬದಲ್ಲೂ ಗೋವನ್ನು ಪೂಜಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಸುವಿನ ಕೆಚ್ಚಲು ಕೊಯ್ದು ಹಾಕುವ ಕೊಡುಗೆಯನ್ನು ನೀಡಿದೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಾನು ಈವರೆಗೆ ನೋಡಿಲ್ಲ ಎಂದುತಿಳಿಸಿದರು.
ನೂರಾರು ವರ್ಷಗಳಿಂದ ಚಾಮರಾಜಪೇಟೆಯಲ್ಲಿ ಪಶು ಆಸ್ಪತ್ರೆ ಇದೆ. ಈ ಭೂಮಿಯನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಗ ಸರ್ಕಾರದ ವಿರುದ್ಧ ಪ್ರತಿಭಟಿಸುವುದರ ಜತೆಗೆ, ನ್ಯಾಯಾಲಯದ ಮೊರೆ ಹೋಗಲಾಯಿತು. ಪ್ರತಿಭಟನೆಯ ಸಮಯದಲ್ಲಿ ಇವೇ ಹಸುಗಳನ್ನು ತೋರಿಸಲಾಗಿತ್ತು. ಅದಕ್ಕಾಗಿಯೇ ಮಚ್ಚು, ಡ್ರ್ಯಾಗರ್ ಬಳಸಿ ಹಸುಗಳ ಕೆಚ್ಚಲು ಕೊಯ್ದು, ಕಾಲು ಕತ್ತರಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ